ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಹಾಗೂ ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ವಿಶೇಷ ಕಾರ್ಯಕ್ರಮವು 2026ರ ಜೂನ್ 21ರಂದು ಪೂರ್ವಾಹ್ನ 7.00 ಗಂಟೆಗೆ ಧರ್ಮಸ್ಥಳದ ‘ಅಮೃತವರ್ಷಿಣಿ ಸಭಾಭವನ’ದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ. ಇನ್ನು ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಭಗವಾನ್ ಬಿ.ಸಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್ ಅವರು ಭಾಗವಹಿಸಲಿದ್ದಾರೆ. ಅಲ್ಲದೆ, ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಪಠ್ಯಕ್ರಮ ಅಭಿವೃದ್ಧಿ ಕೇಂದ್ರದ ಪ್ರಭಾರ ನಿರ್ದೇಶಕರಾದ ಡಾ. ಷಣ್ಮುಖಪ್ಪ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಹಾಗೂ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್. ಅವರು ಗೌರವ ಉಪಸ್ಥಿತರಾಗಿ ಕಾರ್ಯಕ್ರಮದ ರಂಗನ್ನು ಹೆಚ್ಚಿಸಲಿದ್ದಾರೆ.


