ಮಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಅವರಿಗೆ ಪೊಲೀಸರು ನೋಟೀಸ್ ನೀಡಿದ್ದಾರೆ.
ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಕಾರಣಕ್ಕೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಮೂರು ದಿನಗಳ ಒಳಗಾಗಿ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವಂತೆ ಕಾವೂರು ಪೊಲೀಸರು ನೋಟೀಸ್ ನೀಡಿದ್ದಾರೆ.
ಕಾವೂರಿನಲ್ಲಿ ಸೋಮವಾರ ನಡೆದಿದ್ದ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಶಾಸಕ ಭರತ್ ಶೆಟ್ಟಿ, ಸಂಸತ್ ಒಳಗೆ ಹೋಗಿ ರಾಹುಲ್ ಗಾಂಧಿ ಕೆನ್ನೆಗೆ ಬಾರಿಸಬೇಕಿತ್ತು ಅಂತಾ ಅನ್ನಿಸುತ್ತದೆ ಎಂದು ಆಕ್ಷೇಪಾರ್ಹ ಪ್ರತಿಭಟನಾ ಭಾಷಣ ಮಾಡಿದ್ದರು.
ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ದೂರಿನ ಮೇರೆಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ವ್ಯಕ್ತಿ ನಿಂದನೆ ಆರೋಪದಡಿ ಎಫ್ಐಆರ್ ದಾಖಲಾಗಿತ್ತು.


