ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸೆ.5 ರಿಂದ 7 ರವರೆಗೆ 3 ದಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 1500 ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ.
ಸೆ. 8 ರಂದು ಬೆಂಗಳೂರಿಗೆ ಬರಲು ವಿವಿಧ ರಾಜ್ಯ ಹಾಗೂ ಅಂತಾರಾಜ್ಯ ಗಳಿಂದಲೂ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಬಸ್‌ಗಳು ಸೆ. 5ರಂದು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಸಂಚರಿಸಲಿವೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವೀರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಿವೆ. ಶಾಂತಿನಗರದ ಬಿಎಂಟಿಸಿ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಮದುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು ತಿರುಚಿ, ಪಾಲಕ್ಕಾಡ್, ತ್ರಿಶೂಲ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗಲಿದೆ.
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ರುವ ನಿಗಮದ ಕೌಂಟರ್‌ಗಳ ಮೂಲಕ ಇಲ್ಲಿನ ಸಾರಿಗೆಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.
ಹೆಚ್ಚುವರಿ ಬಸ್‌ಗಳು, ಹೊರಡುವ ಸ್ಥಳ ಹಾಗೂ ವೇಳಾಪಟ್ಟಿ ವಿವರವನ್ನು ಮುಂಗಡ ಆಸನಗಳ ಕಾಯ್ದಿರಿಸುವ ಅಂತರ್ಜಾಲ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ನಿಗಮದ ಜಿಲ್ಲಾ ಹಾಗೂ ತಾಲೂಕು ವ್ಯಾಪ್ತಿಯಲ್ಲಿಯೂ ಜನಸಂಚಾರಕ್ಕೆ ಅನುಗುಣವಾಗಿ ವಿಶೇಷ ಸಾರಿಗೆ ಇರಲಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


