ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಬಿಡುಗಡೆ ಮಾಡಿದ್ದು, ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.
ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವೆ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಬೇಕಿದ್ದು, ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರು ಚುನಾವಣಾ ಕೆಲಸಗಳಿಂದ ವಿನಾಯಿತಿ ಪಡೆಯಲಿದ್ದಾರೆ.
ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ಆರಂಭವಾಗಲಿದ್ದು, ಕಾರ್ಯಕರ್ತೆಯರ ಒತ್ತಡವನ್ನು ಇಳಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.


