ಬೆಂಗಳೂರು: ಬೆಂಗಳೂರಿನ ಆರ್ ವಿ ರಸ್ತೆ ಮತ್ತು ಬೊಮ್ಮಸಂದ್ರ ನಡುವಿನ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಪೂರ್ವಕವಾಗಿ ನೀಡಿದ ಬೆಳ್ಳಿ ಗಣೇಶ ಪ್ರತಿಮೆ ತಮ್ಮ ಸ್ವಂತದ್ದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಅಂದಿನ ಕಾರ್ಯಕ್ರಮದಲ್ಲಿ ತಾವು ಪ್ರಧಾನಿ ಅವರಿಗೆ ನೀಡಿದ ಪ್ರತಿಮೆ ಬಿಜೆಪಿ ಶಾಸಕ ಎಂ. ಕೃಷ್ಣಪ್ಪ ಅವರು ತಂದಿದ್ದು ಎಂಬ ಮಾಹಿತಿ ಸತ್ಯಕ್ಕೆ ದೂರವಾದದ್ದು ಹಾಗೂ ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳ್ಳಿ ಪ್ರತಿಮೆಯನ್ನು ತಮ್ಮ ಸ್ವಂತ ಹಣದಿಂದ ಖರೀದಿಸಿದ್ದಾಗಿದ್ದು, ಇದಕ್ಕೆ ಇಲಾಖೆಯ ಹಣವನ್ನೂ ಬಳಸಿಲ್ಲ. ಮನೆಯಿಂದ ತೆಗೆದುಕೊಂಡು ಹೋಗಿ, ತಮ್ಮ ಕಚೇರಿ ಸಿಬ್ಬಂದಿ ಮೂಲಕ ಎಸ್ ಪಿಜಿ ತಪಾಸಣೆಗೆ ಒಳಪಡಿಸಿ ಪ್ರಧಾನಿಯವರಿಗೆ ನೀಡಲಾಯಿತು ಎಂದೂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಅಲ್ಲದೇ, ಬೇರೆಯವರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ದುಸ್ಥಿತಿ ತಮಗೆ ಬಂದಿಲ್ಲ ಎಂದೂ ಡಿಸಿಎಂ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಆಗಸ್ಟ್ 10 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಸಭಾಂಗಣದಲ್ಲಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಮಾರಂಭ ನಡೆದಿತ್ತು.


