ಕಲಬುರಗಿ; ದಕ್ಷ ಐಎಎಸ್ ಅಧಿಕಾರಿಯೆಂದೇ ಹೆಸರುವಾಸಿಯಾಗಿದ್ದ ಮಹಾಂತೇಶ್ ಬೀಳಗಿ ಅಪಘಾತಕ್ಕೆ ಬಲಿಯಾಗಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ಹೋಗುತ್ತಿದ್ದ ವೇಳೆ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಐವರು ಪೈಕಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಇಂದು (ನವೆಂಬರ್ 25) ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮಹಾಂತೇಶ್ ಬೀಳಗಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಐಜಿಪಿ ಶಾಂತನು ಸಿನ್ಹಾ, ಕಲಬುರಗಿ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ದೌಡಾಯಿಸಿದ್ದಾರೆ.


