ಬೆಳಗಾವಿ: ಉಡುಪಿ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಇಂದು ವೀಡಿಯೋ ಸಂವಾದ ನಡೆಸಿದ ಸಚಿವೆ ಹೆಬ್ಬಾಳ್ಕರ್, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲಾ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.
ಅಲ್ಲದೇ, ಜಿಲ್ಲೆಯ ಎಲ್ಲಾ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದೂ ಜಿಲ್ಲಾಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.
ವೀಡಿಯೋ ಸಂವಾದದಲ್ಲಿ ಶಾಸಕರಾದ ವಿ. ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ ಮತ್ತು ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.


