ಕಡಬ: ತಂದೆಗೆ ಚಾಕುವಿನಿಂದ ಇರಿದು ತಾನು ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ನಡೆದಿದೆ.
ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ (17) ಮೃತ ದುರ್ದೈವಿ. ಮೂಲತಃ ಕೇರಳದವರಾದ ವಸಂತ ಅಮೀನ್ ಅವರು ರಾಮಕುಂಜದ ಪಾದೆಯಲ್ಲಿ ಜಾಗ ಖರೀದಿಸಿ ಮನೆ ನಿರ್ಮಿಸಿಕೊಂಡು ವಾಸವಾಗಿದ್ದರು. ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಯಾಗಿದ್ದ ಮೋಕ್ಷ, ಶನಿವಾರ (ಜ. 24) ಸಂಜೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ತಂದೆಯ ಜೊತೆ ಜಗಳವಾಡಿದ್ದಾನೆ ಎನ್ನಲಾಗಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಆಕ್ರೋಶಗೊಂಡ ಮೋಕ್ಷ, ತಂದೆ ವಸಂತ ಅವರಿಗೆ ಚೂರಿಯಿಂದ ಇರಿದಿದ್ದಾನೆ. ಬಳಿಕ ಮನೆಯಲ್ಲಿದ್ದ ಕೋವಿಯನ್ನು ಬಳಸಿ ತನಗೆ ತಾನೇ ಶೂಟ್ ಮಾಡಿಕೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮೋಕ್ಷ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ವಸಂತ ಅಮೀನ್ ಅವರನ್ನು ತಕ್ಷಣವೇ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ ತಂದೆ ಮತ್ತು ಮಗ ಇಬ್ಬರೇ ವಾಸವಿದ್ದರು ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


