ಸುಳ್ಯ; ಮನೆಯಲ್ಲಿಯೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರು ಪೊಲೀಸರು ದಾಳಿ ಮಾಡುತ್ತಿದ್ದ ವೇಳೆ ಪರಾರಿಯಾದ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ,
ಬೆಳ್ಳಾರೆ ಪೊಲೀಸ್ ಉಪನಿರೀಕ್ಷಕರಾದ ಈರಯ್ಯ ಡಿ.ಎನ್ ಅವರಿಗೆ ಕಲ್ಮಡ್ಕದ ಜೋಗಿಬೆಟ್ಟಿನ ಮನೆಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ರಾತ್ರಿ ಸುಮಾರು 9:25 ರ ವೇಳೆಗೆ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರ ವಾಹನ ಬರುತ್ತಿದ್ದಂತೆಯೇ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆ ಸುಲೋಚನಾ ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ ಚಂದ್ರಾವತಿ ಎಂಬವರನ್ನು ವಿಚಾರಿಸಿದಾಗ, ಪರಾರಿಯಾದವರು ತನ್ನ ತಂಗಿ ಸುಲೋಚನಾ ಎಂದು ಹಾಗೂ ಆಕೆ ಯಾವುದೇ ಪರವಾನಿಗೆ ಇಲ್ಲದೆ ಮದ್ಯ ಮಾರಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ.
ಈ ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಮನೆಯ ಹಿಂಬದಿಯ ಕೊಟ್ಟಿಗೆಯಲ್ಲಿ ಅಡಗಿಸಿಟ್ಟಿದ್ದ ಮದ್ಯ ಪತ್ತೆಯಾಗಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು ಸುಮಾರು 15.93 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ 9,000 ರೂಪಾಯಿ ಎಂದು ತಿಳಿದುಬಂದಿದೆ.
ಈ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 17/2026 ರಂತೆ, ಕರ್ನಾಟಕ ಅಬಕಾರಿ ಕಾಯ್ದೆಯ ಕಲಂ 32 ಹಾಗೂ 34 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ಸುಲೋಚನಾ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.


