ಮಂಗಳೂರು: ದೇವಸ್ಥಾನದ ಕಾಣಿಕೆ ಹುಂಡಿಯ ಹಣ ಕಳವು ಮಾಡಿದ್ದ ಅಂತರ್ ರಾಜ್ಯ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಬಂಧಿತ ಆರೋಪಿ.
ಪ್ರಕರಣದ ವಿವರ:
ದಿನಾಂಕ: 03-03-2026 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲನ್ನು ಮುರಿದು ದೇವಸ್ಥಾನಕ್ಕೆ ಒಳನುಗ್ಗಿ, 3 ಕಾಣಿಕೆ ಹುಂಡಿಗಳಲ್ಲಿದ್ದ ಸುಮಾರು ರೂ. 25,000/- ಹಣವನ್ನು ಕಳ್ಳತನವಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯ ಪತ್ತೆಗೆ ತಂಡವನ್ನು ರಚಿಸಲಾಗಿದ್ದು, ಅದರಂತೆ ತನಿಖೆ ನಡೆಸಿದ ಪೊಲೀಸರು ಖಚಿತ ಮಾಹಿತಿಯ ಆಧಾರದ ಮೇಲೆ ಈ ದಿನ ದಿನಾಂಕ: 31-03-2026 ರಂದು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ವಿಚಾರಣೆಗೆ ಒಳಪಡಿಸಿದಾಗ, ಆತನು ಕೆಂಜಾರು ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಕಳವಾಗಿದ್ದ ಕಾಣಿಕೆ ಹುಂಡಿಯನ್ನು ವಶಕ್ಕೆ ಪಡೆಯಲಾಗಿದೆ.
ಈತನು ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಳವು ಪ್ರಕರಣದ ಆರೋಪಿಯಾಗಿರುತ್ತಾನೆ. ಅಲ್ಲದೇ ಇದೇ ವರ್ಷದ ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ಪ್ಯಾಷನ್ ಪ್ರೋ ಮೋಟಾರ್ ಸೈಕಲ್ ಕಳವು ಪ್ರಕರಣದಲ್ಲೂ ಭಾಗಿಯಾಗಿರುತ್ತಾನೆ.
ಆರೋಪಿತನು ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕಳ್ಳತನ ಮಾಡಿ, ಮತ್ತೆ ತಮಿಳುನಾಡಿಗೆ ತೆರಳಿ ತಪ್ಪಿಸಿಕೊಳ್ಳುವ ಪ್ರವೃತ್ತಿ ಹೊಂದಿದವನಾಗಿದ್ದು, ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರುರಾದ ಬಾಲಕೃಷ್ಣ ಮತ್ತು ಠಾಣಾ ಕ್ರೈಂ ಸಿಬ್ಬಂದಿಯಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ರವರು ಆರೋಪಿತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


