ಬಂಟ್ವಾಳ: ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಮಹಿಳೆಯರ ಹಿತರಕ್ಷಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ, ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬಿ.ಸಿ. ರೋಡ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
2023ರ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರುವಲ್ಲಿ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಕೇಂದ್ರ ಸರ್ಕಾರವು ದೇಶದ ಮಹಿಳೆಯರಿಗೆ ನಂಬಿಕೆ ದ್ರೋಹ ಮಾಡುತ್ತಿದೆ ಎಂದು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳಾ ನಾಯಕಿಯರು, ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವುದು ಸಮಾನ ಅಭಿವೃದ್ಧಿಗೆ ಅತ್ಯಗತ್ಯ. ಆದ್ದರಿಂದ ಯಾವುದೇ ಷರತ್ತುಗಳಿಲ್ಲದೆ 2023ರ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಬಂಟ್ವಾಳದ ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಹಾಗೂ ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಪ್ರಮುಖ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.


