ಬೆಂಗಳೂರು: ಮೇ 24 ರಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ನೀಡಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ನಿತಿನ್ ನಬಿನ್ ಭೇಟಿ ನೀಡುತ್ತಿದ್ದಾರೆ.
ಬೆಂಗಳೂರಿನಲ್ಲಿ ನಿತಿನ್ ನಬಿನ್ ನೇತೃತ್ವದಲ್ಲಿ ಬಿಜೆಪಿಯ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರ ಸಭೆ ನಿಗದಿಯಾಗಿದ್ದು, ಅಂದೇ ನಬಿನ್ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ಕೂಡಾ ನಡೆಯಲಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಸಭೆಗಳು ನಡೆಯಲಿವೆ. ಇದೇ ವೇಳೆ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲೆಯ ಪ್ರಶಿಕ್ಷಣ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲೂ ನಿತಿನ್ ನಬಿನ್ ಭಾಗವಹಿಸಲಿದ್ದಾರೆ.
ಕಳೆದ ವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದು, ಒಂದೇ ತಿಂಗಳಲ್ಲಿ ಬಿಜೆಪಿಯ ಮೂವರು ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.


