
ಭಟ್ಕಳ; ಭಟ್ಕಳದಲ್ಲಿ ಕಪ್ಪೆ ಚಿಪ್ಪು ಹೆಕ್ಕಲು ಹೋದ 8 ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪ ಭಾನುವಾರ ನಡೆದಿದೆ.. ಲಕ್ಷ್ಮಿ ಮಹಾದೇವ ನಾಯ್ಕ (42) , ಉಮೇಶ ನಾಯ್ಕ (30), ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ಲಕ್ಷ್ಮಿ ಶಿವರಾಮ ನಾಯ್ಕ (49), ಜ್ಯೋತಿ ನಾಗಪ್ಪ ನಾಯ್ಕ (34), ಮಾಲತಿ ನಾಯ್ಕ (38), ಮಾಸ್ತಮ್ಮ ನಾಯ್ಕ ಮೃತರು.
ಮೃತಪಟ್ಟವರೆಲ್ಲರೂ ಕಪ್ಪೆ ಚಿಪ್ಪು ಆರಿಸಲು ನದಿಗೆ ಇಳಿದಿದ್ದರು. ಸುರಕ್ಷತೆಯ ದೃಷ್ಟಿಯಿಂದ ಇವರೆಲ್ಲರೂ ಪರಸ್ಪರ ಕೈ ಹಿಡಿದುಕೊಂಡು ಸಾಗುತ್ತಿದ್ದರು ಎನ್ನಲಾಗಿದೆ. ಆದರೆ, ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಹೆಚ್ಚಾಗಿತ್ತು. ಇದರ ಜೊತೆಗೆ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿದ್ದರಿಂದ ನದಿಯ ನೀರಿನ ಮಟ್ಟ ದಿಢೀರನೆ ಏರಿಕೆಯಾಗಿದೆ. ಪರಿಣಾಮವಾಗಿ, ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಇವರೆಲ್ಲರೂ ಮುಳುಗಿದ್ದಾರೆ ಎಂದು ಶಂಕಿಸಲಾಗಿದೆ.
ಈ ಭೀಕರ ದುರಂತದಲ್ಲಿ ನಾಗರತ್ನಾ ಮತ್ತು ಮಹಾದೇವಿ ಎಂಬ ಇಬ್ಬರು ಮಹಿಳೆಯರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ತೀವ್ರ ಅಸ್ವಸ್ಥಗೊಂಡಿರುವ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ನದಿಯಲ್ಲಿ ಇನ್ನೂ ಕೆಲವು ಜನರು ಕಣ್ಮರೆಯಾಗಿರುವ ಆತಂಕ ವ್ಯಕ್ತವಾಗಿದ್ದು, ಸ್ಥಳದಲ್ಲಿ ಪರಿಶೋಧನೆ ಮತ್ತು ಪತ್ತೆ ಕಾರ್ಯ ಚುರುಕಿನಿಂದ ಸಾಗುತ್ತಿದೆ. ಘಟನಾ ಸ್ಥಳಕ್ಕೆ ಭಟ್ಕಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಘಟನೆ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬಳಿಯ ತಟ್ಟೆಹಕಲ್ಲು ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಸುದ್ದಿ ಕೇಳಿ ಅತೀವ ನೋವಾಯಿತು. ಅಗಲಿದ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡುತ್ತದೆ. ಈ ಅಪಘಾತದಲ್ಲಿ ಇನ್ನೂ ಕೆಲವರು ಕಾಣೆಯಾಗಿದ್ದಾರೆ ಎಂಬ ಮಾಹಿತಿಯೂ ಇದೆ. ಅವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಕಾಣೆಯಾದ ವ್ಯಕ್ತಿಗಳು ಬದುಕುಳಿದು ಅವರ ಕುಟುಂಬಗಳೊಂದಿಗೆ ಮತ್ತೆ ಸೇರಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದಿದ್ದಾರೆ.


