
ಮಂಗಳೂರು: ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕದ್ದ ಆರೋಪಿಗಳನ್ನು ಪಾಂಡೇಶ್ವರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 14-06-2026 ರಂದು ಮಧ್ಯಾಹ್ನ ಸುಮಾರು 12.30 ಗಂಟೆಗೆ, ಮಂಗಳೂರು ನಗರದ ಸೂಟರ್ಪೇಟೆಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಎಕ್ಕೂರು ಬಸ್ ನಿಲ್ದಾಣದಿಂದ ಇಳಿದು ಸೂಟರ್ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ, ಇಬ್ಬರು ಅಪರಿಚಿತರು ಮೋಟಾರು ಸೈಕಲ್ನ್ಲ್ಲಿ ಬಂದು ವಿಳಾಸ ಕೇಳುವ ನೆಪದಲ್ಲಿ ಏಕಾಏಕಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 12 ಗ್ರಾಂ ತೂಕದ ಲಕ್ಷ್ಮಿ ಪೆಂಡೆಂಟ್ ಹೊಂದಿರುವ ಬಂಗಾರದ ಸರವನ್ನು ಕಸಿದುಕೊಂಡು ಬೈಕ್ ನಲ್ಲಿ ಪರಾರಿಯಾಗಿದ್ದರು. ಆ ಚಿನ್ನದ ಸರದ ಅಂದಾಜು ಮೌಲ್ಯ ಸುಮಾರು ₹1,50,000/- ಆಗಿರುತ್ತದೆ. ಎಂಬುದಾಗಿ ನೀಡಿದ ದೂರಿನ ಆಧಾರದ ಮೇಲೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ 26-06-2026 ರಂದು ಬೆಳಿಗ್ಗೆ ಮಂಗಳೂರು ನಗರದ ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಮೂವರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಸೇರಿಕೊಂಡು ಸರಕಳವು ಮಾಡಿಕೊಂಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾರೆ. ಅದರಂತೆ ಆರೋಪಿಗಳಾದ ಅಲ್ತಾಫ್ ಹುಸೈನ್ (ಬಾಗಲಕೋಟೆ ನಿವಾಸಿ), ಮೊಹಮ್ಮದ್ ಸಾಹಿಲ್ @ ಸಿದ್ದೀಖಿ (ಉತ್ತರ ಪ್ರದೇಶ ನಿವಾಸಿ) ಹಾಗೂ ರವಿ ಬೌರಾ (ಉತ್ತರ ಪ್ರದೇಶ ನಿವಾಸಿ) ಎಂಬವರನ್ನು ಬಂಧಿಸಿದ್ದರು. ಆದರೆ ಆರೋಪಿಗಳನ್ನು ಠಾಣೆಗೆ ಕರೆದುಕೊಂಡು ಬರುತ್ತಿದ್ದ ವೇಳೆ, ಆರೋಪಿ ಅಲ್ತಾಫ್ ಹುಸೈನ್ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಅವರನ್ನು ತಳ್ಳಿ ಪರಾರಿಯಾಗಿದ್ದಾನೆ. ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಯಾದ ವಿನಾಯಕ ರವರಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಈ ಬಗ್ಗೆ ಪ್ರತ್ಯೇಕ ಪ್ರಕರಣವನ್ನು ಅಕ್ರ 133/2026 ಕಲಂ 121(1), 132, 362 ಬಿಎನ್ಎರಸ್ ರಂತೆ ದಾಖಲಿಸಿ ಸದರಿ ಆರೋಪಿಯಾದ ಅಲ್ತಾಫ್ ಹುಸೈನ್ ರವರನ್ನು ಪತ್ತೆ ಹಚ್ಚಲು ತಂಡವನ್ನು ರಚಿಸಿ ಶೋಧನಾ ಕಾರ್ಯವನ್ನು ಮುಂದುವರೆಸಲಾಗಿದೆ. ಅಲ್ಲದೇ ವಿವರಗಳನ್ನು ನಿಸ್ತಂತು ,ಮೂಲಕ ಇತರ ಜಿಲ್ಲೆ ರಾಜ್ಯಗಳಿಗೆ ರವಾನಿಸಲಾಗಿದೆ.
ಪ್ರಕರಣದಲ್ಲಿ ರವಿ ಬೌರಾ ಹಾಗೂ ಮೊಹಮ್ಮದ್ ಸಾಹಿಲ್ @ ಸಿದ್ದೀಖಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ದಿನ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ 10 ದಿನಗಳ ಕಾಲ ದಿನಾಂಖ 06-07-2026 ರ ವರೆಗೆ ಪೊಲೀಸ್ ಕಸ್ಟಡಿಗೆ ತನಿಖೆಯ ಬಗ್ಗೆ ನೀಡಿರುತ್ತಾರೆ. ಪರಾರಿಯಾಗಿರುವ ಅಲ್ತಾಫ್ ಹುಸೈನ್ನ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಪ್ರಕರಣವನ್ನು ಪತ್ತೆ ಕಾರ್ಯದಲ್ಲಿ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ರವರ ನೇತ್ರತ್ವದಲ್ಲಿ ಪ್ರಕರಣವನ್ನು ತ್ವರಿತವಾಗಿ ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ತನಿಖೆಯನ್ನು ಮುಂದುವರಿಸಲಾಗಿದೆ.


