
ಮಂಗಳೂರು: ನಗರದ ಪುರಭವನದ ಸಮೀಪದ ಫುಟ್ಪಾತ್ನಲ್ಲಿ ವ್ಯಾಪಾರ ಮಾಡುತ್ತಿದ್ದ ಬೀದಿಬದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ (ಮನಪಾ) ಅಧಿಕಾರಿಗಳು ರವಿವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದ್ದಾರೆ.
ಮನಪಾ ಆಯುಕ್ತ ರವಿಚಂದ್ರ ನಾಯಕ್ ಅವರ ನೇರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಆರಂಭದಲ್ಲಿ ಅವರು ವ್ಯಾಪಾರಿಗಳ ಬಳಿ ತೆರಳಿ ಕಾನೂನು ಬಾಹಿರವಾಗಿ ಇಲ್ಲಿ ವ್ಯಾಪಾರ ಮಾಡಲು ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವ್ಯಾಪಾರಿಗಳು ತವು ಕಳೆದ 40 ವರ್ಷಗಳಿಂದ ಇಲ್ಲೇ ಪ್ರಾಮಾಣಿಕವಾಗಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿರುವುದಾಗಿ ತಿಳಿಸಿ, ತಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಯುಕ್ತರಲ್ಲಿ ಮನವಿ ಮಾಡಿದರು.
ಆದರೆ, ಸದ್ಯಕ್ಕೆ ಯಾವುದೇ ಬದಲಿ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಆಯುಕ್ತರು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುನ್ನೆಚ್ಚರಿಕೆ ನೀಡಿದರು. ಆಯುಕ್ತರ ಈ ಕಡಕ್ ನಿರ್ಧಾರದಿಂದ ಅಸಮಾಧಾನಗೊಂಡು ಪಾಲಿಕೆಯ ಕಾರ್ಯಾಚರಣೆಗೆ ಅಡ್ಡಿಪಡಿಸಲು ಯತ್ನಿಸಿದ ವ್ಯಾಪಾರಿಗಳನ್ನು ಸ್ಥಳದಲ್ಲಿದ್ದ ಪೊಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು.


