
ರಾಮನಗರ: ಬಿಡದಿ ಟೌನ್‌ಶಿಪ್ (GBDA) ಯೋಜನೆಯ ಜಮೀನು ಒತ್ತುವರಿ ವಿಚಾರದಲ್ಲಿ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.
ಯೋಜನೆಗಾಗಿ ಜಿಬಿಡಿಎ ಅಧಿಕಾರಿಗಳು ಹಮ್ಮಿಕೊಂಡಿದ್ದ ಜೆಎಂಸಿ ಸರ್ವೆಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಲವಂತದ ಸರ್ವೆಗೆ ಮುಂದಾದ ಅಧಿಕಾರಿಗಳ ಕಾರನ್ನು ಸುತ್ತುವರಿದ ರೈತ ಮಹಿಳೆಯರು, ಪೊಲೀಸರ ಸಮ್ಮುಖದಲ್ಲೇ ಪೊರಕೆಗಳಿಂದ ಹೊಡೆದು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಯಾವುದೇ ಕಾರಣಕ್ಕೂ ತಮ್ಮ ಭೂಮಿಯನ್ನು ಬಿಟ್ಟುಕೊಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.
ಘಟನಾ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ ಗೌಡ, ಎಎಸ್ಪಿ ರಾಮಚಂದ್ರಯ್ಯ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರೊಂದಿಗೆ ಮಾತುಕತೆ ನಡೆಸಿ ಸಮಾಧಾನಪಡಿಸಲು ಯತ್ನಿಸಿದ ಎಸ್ಪಿ ಅವರು, ಕಾನೂನು ಕೈಗೆತ್ತಿಕೊಳ್ಳದಂತೆ ಮತ್ತು ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸದಂತೆ ರೈತರಲ್ಲಿ ಮನವಿ ಮಾಡಿದ್ದಾರೆ. ಸದ್ಯ ಮಂಡಲಹಳ್ಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.


