
ಉಡುಪಿ: 2002ರಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ, ಬರೋಬ್ಬರಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ವಿಲಾಸ್ ಶಿಂಧೆಯನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
2002ರ ಸೆಪ್ಟೆಂಬರ್ 7ರಂದು ಬೆಳಿಗ್ಗೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ, ಆರೋಪಿಯು ತನ್ನ ಮಿನಿ ಗೂಡ್ಸ್ ಲಾರಿಯನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ಶಾಲಾ ಬಾಲಕನಿಗೆ ಡಿಕ್ಕಿ ಹೊಡೆದಿದ್ದನು. ಈ ಅಪಘಾತದಲ್ಲಿ ಬಾಲಕ ಮೃತಪಟ್ಟಿದ್ದನು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿಲಾಸ್ ಶಿಂಧೆಗೆ ಮೂರು ತಿಂಗಳ ಜೈಲು ಶಿಕ್ಷೆ ಹಾಗೂ ₹1,000 ದಂಡ ವಿಧಿಸಿ ತೀರ್ಪು ನೀಡಿತ್ತು. ಆದರೆ ತೀರ್ಪಿನ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದರಿಂದ ಆತನ ವಿರುದ್ಧ ಎಲ್‌ಪಿಸಿ (LPC) ವಾರಂಟ್ ಹೊರಡಿಸಲಾಗಿತ್ತು.
ಇತ್ತೀಚೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ಅವರ ನಿರ್ದೇಶನ ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಡುಬಿದ್ರಿ ಪಿಎಸ್‌ಐ ಸಕ್ತಿವೇಲು ಮತ್ತು ಅನಿಲ್ ಕುಮಾರ್ ನಾಯಕ್ ನೇತೃತ್ವದ ತಂಡ ಮಹಾರಾಷ್ಟ್ರಕ್ಕೆ ತೆರಳಿ, ಪುಣೆಯಲ್ಲಿ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.


