
ಉಡುಪಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷಭಾಷಣ ಮಾಡಿದ್ದಾರೆ ಎಂದು ಆರೋಪಿಸಿ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸ್ಥಳೀಯ ಶಾಸಕ ಯಶ್‌ಪಾಲ್ ಸುವರ್ಣ ಅವರ ವಿರುದ್ಧ ಪ್ರತಿಭಟನೆ ನಡೆಸಿ, ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಗುರುವಾರ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ನಗರದ ಜೋಡುಕಟ್ಟೆ ಹಾಗೂ ಶಾಸಕರ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಇದೇ ವೇಳೆ ಶಾಸಕರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಜೋಡುಕಟ್ಟೆಗೆ ಆಗಮಿಸಿದ ಯುವ ಕಾಂಗ್ರೆಸ್ ನಾಯಕರು ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗುತ್ತಾ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದು ಬಂಧಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಕೂಡ ಕಾಂಗ್ರೆಸ್ ವಿರುದ್ಧ ಪ್ರತಿಯಾಗಿ ಘೋಷಣೆಗಳನ್ನು ಕೂಗಿದರು.


