
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ 55 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ.
ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ.
ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿ, ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ತಡವಾದರೂ ಮನೆಗೆ ಹಿಂದಿರುಗದ ಹಿನ್ನೆಲೆಯಲ್ಲಿ ಕುಟುಂಬದವರು ಹಾಗೂ ಸ್ಥಳೀಯರು ಅವರಿಗಾಗಿ ಹುಡುಕಾಟ ಆರಂಭಿಸಿದರು. ಹುಡುಕಾಟದ ವೇಳೆ ಅವರು ಧರಿಸಿದ್ದ ಪ್ಲಾಸ್ಟಿಕ್ ರೈನ್ಕೋಟ್ ದಾರಿಯ ಮಧ್ಯೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರ ಸಮೀಪದಲ್ಲಿ ಕಾಡಾನೆಯ ಹೆಜ್ಜೆ ಗುರುತುಗಳು ಕಂಡುಬಂದಿವೆ. ಇದರಿಂದ ಕಾಡಾನೆ ದಾಳಿ ನಡೆಸಿರಬಹುದೆಂಬ ಅನುಮಾನ ವ್ಯಕ್ತವಾಗಿತ್ತು.
ಬಳಿಕ ಸ್ಥಳೀಯರು ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹುಡುಕಾಟ ನಡೆಸಿದಾಗ ಸಮೀಪದ ಕಣಿಯೊಂದರಲ್ಲಿ ಬಾಲಕೃಷ್ಣ ಗೌಡ ಅವರ ಮೃತದೇಹ ಪತ್ತೆಯಾಯಿತು. ಪ್ರಾಥಮಿಕ ಮಾಹಿತಿಯಂತೆ ಕಾಡಾನೆ ದಾಳಿಯಿಂದಲೇ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


