Sunday, August 2, 2026
Homeಕರಾವಳಿಮಂಗಳೂರುಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಚಿನ್ನದ ಕರಿಮಣಿ ಸರ ಕಳವು? ; ಪಾಂಡೇಶ್ವರ ಠಾಣೆಗೆ...

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಚಿನ್ನದ ಕರಿಮಣಿ ಸರ ಕಳವು? ; ಪಾಂಡೇಶ್ವರ ಠಾಣೆಗೆ ಪತಿ ದೂರು

- Advertisement -
- Advertisement -

ಮಂಗಳೂರು: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಕರಿಮಣಿ ಸರ ನಾಪತ್ತೆಯಾಗಿರುವ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಮೃತ ಮಹಿಳೆಯ ಪತಿ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶಕ್ತಿನಗರ ನಿವಾಸಿ ಸುಂದರ ಪೂಜಾರಿ ಅವರ ಪತ್ನಿ ಜಾನಕಿ (53) ಸರ ಕಳೆದುಕೊಂಡವರು.

ಘಟನೆಯ ವಿವರ:

ಜುಲೈ 26ರಂದು ಬೆಳಿಗ್ಗೆ ಜಾನಕಿ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಟೋ ರಿಕ್ಷಾದಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ಹೃದ್ರೋಗ ತಜ್ಞರು ಲಭ್ಯವಿಲ್ಲದ ಕಾರಣ, ಹೆಚ್ಚಿನ ಚಿಕಿತ್ಸೆಗೆ ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಯಿತು. ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ವೈದ್ಯರು ಪರೀಕ್ಷಿಸಿದಾಗ ಜಾನಕಿ ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು.

ಆಸ್ಪತ್ರೆಗೆ ಕರೆತರುವಾಗ ಜಾನಕಿ ಅವರ ಕುತ್ತಿಗೆಯಲ್ಲಿ ಸುಮಾರು 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಇತ್ತು. ಆದರೆ, ವೈದ್ಯರ ಪರೀಕ್ಷೆಯ ಬಳಿಕ ಮೃತದೇಹವನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಕುತ್ತಿಗೆಯಲ್ಲಿದ್ದ ಸರ ನಾಪತ್ತೆಯಾಗಿರುವುದು ಕಂಡುಬಂದಿದೆ. ಆಸ್ಪತ್ರೆಯಲ್ಲೇ ಯಾರೋ ಕಿಡಿಗೇಡಿಗಳು ಈ ಸರವನ್ನು ಕದ್ದಿರಬಹುದು ಎಂದು ಶಂಕಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ಇತರ ಸಾಕ್ಷ್ಯಗಳನ್ನು ಆಧರಿಸಿ ಸರವನ್ನು ಪತ್ತೆಹಚ್ಚಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪತಿ ಸುಂದರ ಪೂಜಾರಿ ಪೊಲೀಸರನ್ನು ಒತ್ತಾಯಿಸಿದ್ದಾರೆ. ಪಾಂಡೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

- Advertisement -

Latest News

error: Content is protected !!