
ಬೆಳ್ತಂಗಡಿ : 11 ವರ್ಷದ ಹಿಂದೆ ಬೆಳ್ತಂಗಡಿ ತಾಲೂಕು ಕಛೇರಿ ಬಳಿ ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಸಂಘಟನೆಯ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಪಕ್ಷದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬವರ ವಿರುದ್ದ ಆರೋಪ ಸಾಬೀತಾಗಿದ್ದು ಆರೋಪಿಗೆ ಕಲಂ 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಗೃಹ ವಾಸ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ಬೆಳ್ತಂಗಡಿ ನ್ಯಾಯಾಲಯ ಆದೇಶ ನೀಡಿದೆ.
ದಿನಾಂಕ 23-07-2015 ರಂದು ಬೆಳ್ತಂಗಡಿ ತಾಲೂಕು ಕಛೇರಿ ಬಳಿ ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ, ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 315/2015, ಕಲಂ: 153(A)295(A) ಭಾ.ದಂ.ಸಂ (IPC)ರಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸದ್ರಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ದೊಷಾರೊಪಣಾ ಪಟ್ಟಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ರಾಮಲಿಂಗಪ್ಪರವರು ಆರೋಪಿಗೆ ಕಲಂ 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಗೃಹ ವಾಸ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ಆ.4 ರಂದು ಅದೇಶ ನೀಡಿದೆ.ಸರಕಾರಿ ಅಭಿಯೋಜಕರಾದ ಶ್ರೀಮತಿ ಆಶೀತಾರವರು ಸಮರ್ಥವಾಗಿ ವಾದಮಂಡನೆ ನಡೆಸಿರುತ್ತಾರೆ.


