
ಆಗಸ್ಟ್ 13 ರಂದು ‘ಕರ್ನಾಟಕ ಬಂದ್’ ನಿಶ್ಚಿತವಾಗಿದ್ದು, ಈ ಬಂದ್ಗೆ ಈಗಾಗಲೇ ಹಲವು ಕನ್ನಡ ಮತ್ತು ಪ್ರಗತಿಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಹಿರಿಯ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಅವರು ತಿಳಿಸಿದ್ದಾರೆ.
“ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ, ಮಹದಾಯಿ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರ ಗೊತ್ತುವಳಿ ಮಂಡಿಸದಿರುವುದನ್ನು ವಿರೋಧಿಸಿ ಆಗಸ್ಟ್ 13 ರಂದು ‘ಕರ್ನಾಟಕ ಬಂದ್’ ಆಚರಿಸಲಾಗುವುದು ಎಂದು ಘೋಷಿಸಿದರು.
ಅಷ್ಟೇ ಅಲ್ಲದೆ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಹಿತಾಸಕ್ತಿಯನ್ನು ಕಾಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಟುವಾಗಿ ಟೀಕಿಸಿದರು. ಮಹದಾಯಿ, ಕಳಸಾ-ಬಂಡೂರಿ, ಕಾವೇರಿ ಮತ್ತು ಕೃಷ್ಣಾ ನದಿಗಳ ನೀರು ಹಂಚಿಕೆಯಂತಹ ಪ್ರಮುಖ ವಿಷಯಗಳಲ್ಲಿ ಕೇಂದ್ರ ಸರ್ಕಾರದ ಮುಂದೆ ರಾಜ್ಯದ ಪರವಾಗಿ ಸೂಕ್ತ ಹಾಗೂ ಪ್ರಬಲ ವಾದ ಮಂಡಿಸಲು ಈ ನಾಯಕರಿಗೆ ಸಾಧ್ಯವಾಗಿಲ್ಲ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


