
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 16ನೇ ಆವೃತ್ತಿಯ “ಆಳ್ವಾಸ್ ಪ್ರಗತಿ – 2026” ಎರಡು ದಿನಗಳ ಅತೀದೊಡ್ಡ ಉಚಿತ ಉದ್ಯೋಗ ಮೇಳವು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಆಗಸ್ಟ್ 7 ರಂದು ಬೆಳಿಗ್ಗೆ 9:30 ಕ್ಕೆ ಪ್ರಾರಂಭವಾಗಲಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅವರು, ಡಾ| ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭವನ್ನು ಸಚಿವ ಯು. ಟಿ. ಖಾದರ್ ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ಶಾಸಕ ಉಮಾನಾಥ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಕ್ಯಾ| ಬ್ರಿಜೇಶ್ ಚೌಟ ಮುಖ್ಯ ಅತಿಥಿಯಾಗಿ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮೇಳದ ಯೋಜನೆ ಮತ್ತು ಯಶಸ್ವಿ ಸಂಘಟನೆಗೆ ಮಹತ್ವದ ಕೊಡುಗೆ ನೀಡಿ ಇತ್ತೀಚೆಗೆ ನಿಧನರಾದ ದಿವಂಗತ ಕೆ. ಮಹೇಶ್ ಶೇಖ್ ಅವರ ಹೆಸರನ್ನು ಈ ವರ್ಷದ ಮುಖ್ಯ ವೇದಿಕೆಗೆ ಇಡುವ ಮೂಲಕ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಉದ್ಯಮಶೀಲತೆ, ಉದ್ಯೋಗ ಸೃಷ್ಟಿ ಮತ್ತು ಸಮಾಜ ಸೇವೆಯಲ್ಲಿ ಗಮನಾರ್ಹ ಸಾಧನೆ ಮಾಡಿದ ಪ್ರಮುಖರನ್ನು ಗೌರವಿಸಲಾಗುವುದು. ಶ್ರೀಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್. ಜನಾರ್ದನ, ಎಂಆರ್ಜಿ ಗ್ರೂಪ್ನ ಡಾ| ಕೆ. ಪ್ರಕಾಶ್ ಶೆಟ್ಟಿ, ಭವಾನಿ ಗ್ರೂಪ್ನ ಕುಸುಮೋದರ ಡಿ. ಶೆಟ್ಟಿ, ಪ್ರೊವಿಟ್ ಫುಡ್ಸ್ನ ವಿನ್ಸೆಂಟ್ ಕುಟಿನ್ಹಾ ಹಾಗೂ ಎಕ್ಸ್ಪರ್ಟೀಸ್ ಕಾಂಟ್ರಾಕ್ಟಿಂಗ್ ಕಂಪೆನಿಯ ಸಹ ಸಂಸ್ಥಾಪಕ ಮಹಮ್ಮದ್ ಅಸ್ಪಾಕ್ ಅವರಿಗೆ ಈ ವರ್ಷದ ಸಾಧಕ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು.
ಈ ಬಾರಿಯ ಮೇಳದಲ್ಲಿ ದೇಶ-ವಿದೇಶಗಳ 350ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುತ್ತಿದ್ದು, ಐಟಿ, ಉತ್ಪಾದನೆ, ಬ್ಯಾಂಕಿಂಗ್, ಆರೋಗ್ಯ, ಆತಿಥ್ಯ, ಮಾಧ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 26,300ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿರಲಿವೆ. ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಹಾಗೂ ವೃತ್ತಿಪರ ಶಿಕ್ಷಣ ಮುಗಿಸಿದ ಅಭ್ಯರ್ಥಿಗಳಿಗೆ ಮತ್ತು ಅನುಭವಸ್ಥರಿಗೆ ಇದು ಸೂಕ್ತ ವೇದಿಕೆಯಾಗಿದೆ.
ಉದ್ಯೋಗಾಕಾಂಕ್ಷಿಗಳಿಗೆ ಮೇಳಕ್ಕೆ ಉಚಿತ ಪ್ರವೇಶವಿದ್ದು, https://alvaspragati.com/candidate-registration ವೆಬ್ಸೈಟ್ ಮೂಲಕ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಂದ ಆಗಮಿಸುವ ಅಭ್ಯರ್ಥಿಗಳಿಗೆ ಆಗಸ್ಟ್ 6 ರಿಂದಲೇ ಉಚಿತ ವಸತಿ ಸೌಲಭ್ಯ ಕಲ್ಪಿಸಲಾಗಿದ್ದು, ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನೂ ಮಾಡಲಾಗಿದೆ.


