
ವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲಾ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ವಿಟ್ಲಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಸುಮಾರು 15ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕರೆದುಕೊಂಡು ಶಾಲೆಯತ್ತ ತೆರಳುತ್ತಿದ್ದ ಬಸ್, ಕುಂಟುಕುಡೇಲಿನ ಇಳಿಜಾರು ರಸ್ತೆಯಲ್ಲಿ ತಲುಪುತ್ತಿದ್ದಂತೆ ದಿಢೀರ್ ತಾಂತ್ರಿಕ ದೋಷಕ್ಕೆ ಒಳಗಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ನೇರವಾಗಿ ರಸ್ತೆಯಿಂದ ಕೆಳಗಿಳಿದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ರಭಸದಿಂದ ಢಿಕ್ಕಿ ಹೊಡೆದಿದೆ.
ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಬಸ್ಸಿನ ಮೇಲೆಯೇ ಬಿದ್ದಿತ್ತಾದರೂ, ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಅಪಘಾತದಿಂದಾಗಿ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಧಾವಿಸಿ ಬಂದು, ಬಸ್ಸಿನಲ್ಲಿದ್ದ ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಯಾವುದೇ ಗಾಯಗಳಿಲ್ಲದೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದು, ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.


