ಉಡುಪಿ: ರಾಷ್ಟ್ರೀಯ ಅರಣ್ಯ ಹುತಾತ್ಮರ ಸ್ಮರಣಾರ್ಥವಾಗಿ ಸೆಪ್ಟಂಬರ್ 11ರಂದು ಬೆಳಿಗ್ಗೆ 10:30ಕ್ಕೆ ಬ್ರಹ್ಮಗಿರಿಯ ಐ.ಎಂ.ಎ. ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.
ಉಡುಪಿ ಜಿಲ್ಲೆಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಹಾಗೂ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಜಂಟಿ ಆಶ್ರಯದಲ್ಲಿ, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ ಮತ್ತು ಐ.ಎಂ.ಎ. ಉಡುಪಿ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರನ್ ಪಿ ಅವರು ಈ ಶಿಬಿರವನ್ನು ಉದ್ಘಾಟಿಸಲಿದ್ದು, ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ನಾಗೇಶ್ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಗಸ್ತು ಅರಣ್ಯ ಪಾಲಕರ ಮತ್ತು ವೀಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಕೇಶವ ಪೂಜಾರಿ ಎಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ. ಹುಬ್ಬಳ್ಳಿ ಹಾಗೂ ಐ.ಎಂ.ಎ. ಉಡುಪಿ ಅಧ್ಯಕ್ಷ ಡಾ. ಅಶೋಕ್ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜೊತೆಗೆ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಡಿ.ಎನ್., ಅರಣ್ಯ ಸಂಚಾರಿ ದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ಕುಮಾರ್ ಶೆಟ್ಟಿ, ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಡಿ. ದಿನೇಶ್, ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ್ ಶೆಟ್ಟಿ ಅಂಪಾರು, ಬೆಂಗಳೂರು ವಲಯ ಅರಣ್ಯಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಮತ್ತು ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.


