ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ಅಕ್ರಮವಾಗಿ ಮೊಬೈಲ್ ಫೋನ್ ಬಳಸುತ್ತಿದ್ದಾರೆಂಬ ಖಚಿತ ಮಾಹಿತಿ ಆಧರಿಸಿ ಸೆ.7 ರಂದು ಪೊಲೀಸರು ಜೈಲಿನ ಮೇಲೆ ಅನಿರೀಕ್ಷಿತ ದಾಳಿ ನಡೆಸಿದ್ದಾರೆ.
ಸೆಪ್ಟೆಂಬರ್ 8ರ ರಾತ್ರಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 82/2026, ಕಲಂ 323 ಬಿಎನ್‌ಎಸ್ ಹಾಗೂ ಕರ್ನಾಟಕ ಕಾರಾಗೃಹ ಕಾಯ್ದೆಯ ಕಲಂ 42 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.
ತನಿಖೆಯ ಹಿನ್ನೆಲೆಯಲ್ಲಿ ಮಂಗಳೂರು ಜಿಲ್ಲಾ ಕಾರಾಗೃಹದ ವಿವಿಧ ಭಾಗಗಳಲ್ಲಿ ಪೊಲೀಸರು ಸೆ.7 ರಂದು ತಪಾಸಣೆ ನಡೆಸಿದ ವೇಳೆ, ಎ-ಬ್ಲಾಕ್‌ನಲ್ಲಿದ್ದ 9 ಮಂದಿ ಕೈದಿಗಳು ಅಕ್ರಮವಾಗಿ ಬಚ್ಚಿಟ್ಟುಕೊಂಡಿದ್ದ 10 ಮೊಬೈಲ್ ಸ್ಮಾರ್ಟ್‌ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಮೊಬೈಲ್‌ಗಳು ಪತ್ತೆಯಾದ ಕೈದಿಗಳನ್ನು ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಸ್ಫಕ್ ಅಲಿಯಾಸ್ ಜುಟ್ಟು ಅಸ್ಫಕ್, ಅರ್ಷದ್, ದಾವುದ್ ಫರ್ವೇಜ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದೀಕ್ ಹಾಗೂ ಅರ್ಫಜ್ ಎಂದು ಗುರುತಿಸಲಾಗಿದೆ. ಇವರ ಪೈಕಿ ಮೊದಲ ನಾಲ್ವರು ಇತ್ತೀಚೆಗೆ ತೊಕ್ಕೊಟ್ಟು ಬಳಿ ನಡೆದ ಅರೀಫ್ ಕೊಲೆ ಪ್ರಕರಣದ ಆರೋಪಿಗಳಾಗಿದ್ದು, ಐದರಿಂದ ಎಂಟನೇ ಕೈದಿಗಳು ಎನ್‌ಡಿಪಿಎಸ್ ಪ್ರಕರಣಗಳಲ್ಲಿ ಡ್ರಗ್ ಪೆಡ್ಲರ್ ಆರೋಪಿಗಳಾಗಿದ್ದಾರೆ. ಒಂಬತ್ತನೇ ಕೈದಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೋಕಾ ಪ್ರಕರಣದ ಆರೋಪಿಯಾಗಿದ್ದಾನೆ.
ವಶಪಡಿಸಿಕೊಂಡಿರುವ 10 ಮೊಬೈಲ್ ಫೋನ್‌ಗಳನ್ನು ಯಾರು ಪೂರೈಸಿದ್ದಾರೆ, ಕೈದಿಗಳು ಅವುಗಳನ್ನು ಯಾವ ಉದ್ದೇಶಕ್ಕಾಗಿ ಬಳಸುತ್ತಿದ್ದರು ಎಂಬುದರ ಕುರಿತು ಬರ್ಕೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.


