ನವದೆಹಲಿ: ಸೆಪ್ಟೆಂಬರ್ 28 ರಿಂದ 3 ದಿನಗಳ ಕಾಲ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರದ ಹಿನ್ನೆಲೆಯಲ್ಲಿ, ಗ್ರಾಹಕರ ಹಿತದೃಷ್ಟಿಯಿಂದ ಸೆಪ್ಟೆಂಬರ್ 27ರ ಭಾನುವಾರದಂದು ದೇಶದ ಎಲ್ಲಾ ಸಾರ್ವಜನಿಕ ವಲಯದ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಕಾರ್ಯನಿರ್ವಹಿಸಲಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಿಸಿದೆ.
ಸೆಪ್ಟೆಂಬರ್ 26 (4ನೇ ಶನಿವಾರ) ಹಾಗೂ ಸೆಪ್ಟೆಂಬರ್ 27 (ಭಾನುವಾರ) ರಜೆಯ ನಂತರ ಸತತ 3 ದಿನ ಮುಷ್ಕರ ನಡೆಯುವುದರಿಂದ, ಒಟ್ಟು 5 ದಿನ ಬ್ಯಾಂಕಿಂಗ್ ಸೇವೆ ಸ್ಥಗಿತಗೊಳ್ಳುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಆರ್‍ಬಿಐ ಅನುಮೋದನೆಯೊಂದಿಗೆ ಭಾನುವಾರ ಬ್ಯಾಂಕ್ ಶಾಖೆಗಳು, ಕಚೇರಿಗಳು ಹಾಗೂ ಕರೆನ್ಸಿ ಚೆಸ್ಟ್‌ಗಳು ಪೂರ್ಣ ಪ್ರಮಾಣದಲ್ಲಿ ತೆರೆದಿರಲಿವೆ.
ವಾರಕ್ಕೆ 5 ದಿನಗಳ ಬ್ಯಾಂಕಿಂಗ್ ಜಾರಿ, ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಸಾರ್ವಜನಿಕರು ತುರ್ತು ವಹಿವಾಟಿಗೆ ಯುಪಿಐ, ಇಂಟರ್ನೆಟ್ ಬ್ಯಾಂಕಿಂಗ್ ಹಾಗೂ ಎಟಿಎಂನಂತಹ ಡಿಜಿಟಲ್ ಸೇವೆಗಳನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.


