ಮುಂಬೈ: ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ವತಿಯಿಂದ ಶುಕ್ರವಾರ ಮುಂಬೈನ ಐತಿಹಾಸಿಕ ಶಿವಾಜಿ ಪಾರ್ಕ್ನಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರೂ, ಕೇಂದ್ರ ಮುಂಬೈ ಹಾಗೂ ದಾದರ್ ರೈಲ್ವೆ ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಮತ್ತು ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು. ಇದರ ನಡುವೆಯೂ ಸಾವಿರಾರು ಯುವಕ-ಯುವತಿಯರು ಶಿವಾಜಿ ಪಾರ್ಕ್ಗೆ ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.
ಪ್ರತಿಭಟನಾಕಾರರು ‘ಜ್ಞಾನೇಶ್ ಅವರೇ, ನಿಮಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ವಾ?’, ‘ಜ್ಞಾನೇಶ್ ಅವರೇ ರಾಜೀನಾಮೆ ನೀಡಿ’ ಸೇರಿದಂತೆ ವಿವಿಧ ಘೋಷಣೆಗಳನ್ನು ಒಳಗೊಂಡ ಫಲಕಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ಯುವ ಸಂಘಟನೆಗಳಾದ ಎಸ್ಎಫ್ಐ ಮತ್ತು ಎಐಎಸ್ಎಫ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಟರಾದ ಶಬಾನಾ ಅಜ್ಮಿ, ನಸೀರುದ್ದೀನ್ ಶಾ, ಗಾಯಕ ವಿಶಾಲ್ ದದ್ಲಾನಿ ಹಾಗೂ ಮಹಾತ್ಮ ಗಾಂಧೀಜಿಯವರ ಮರಿಮೊಮ್ಮಗ ತುಷಾರ್ ಗಾಂಧಿ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


