ಮಂಗಳೂರು: ಕೋರಿಯರ್ ಮೂಲಕ ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ಹಾಗೂ ಕೇರಳದ ವಿವಿಧೆಡೆ ಮಾರಾಟ ಮಾಡಲು ಸಂಚು ರೂಪಿಸಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಕಾಸರಗೋಡು ಜಿಲ್ಲೆಯ ಮಂಗಳ್ಪಾಡಿ ನಿವಾಸಿ ಅಬ್ದುಲ್ ಹಾಪೀಲ್ (25), ಮಂಗಳೂರಿನ ಕೂಳೂರು ಕಸಬಾ ಬೆಂಗ್ರೆ ನಿವಾಸಿ ಜಿಯಾವುಲ್ ಹಕ್ (30) ಹಾಗೂ ಜಲ್ಲಿಗುಡ್ಡೆ ಬಜಾಲ್ ಮೂಲದ, ಪ್ರಸ್ತುತ ಪಾಂಡೇಶ್ವರ ನಿವಾಸಿ ಅಲ್ತಾಫ್ (28) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಅಕ್ಟೋಬರ್ 8ರಂದು ರಾತ್ರಿ 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಬಳಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್ಗಳು, ಸಾಗಾಟಕ್ಕೆ ಬಳಸಿದ್ದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೊ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.


