ಚಿಕ್ಕಮಗಳೂರು: ದೆವ್ವ ಹಾಗೂ ಭೂತ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರ ಮೂಢನಂಬಿಕೆಯನ್ನು ದುರ್ಬಳಕೆ ಮಾಡಿಕೊಂಡು ನಿರಂತರವಾಗಿ ಅತ್ಯಾಚಾರ ಎಸಗಿದ್ದ ಆರೋಪಿ ಸತೀಶ್ ಪಾತ್ರಿಯನ್ನು ಕೊಪ್ಪ ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಹಾಸನ ಮೂಲದ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿ ಸತೀಶ್ ಪಾತ್ರಿ ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಹಾಗೂ ತೀರ್ಥಹಳ್ಳಿಯ ಕುದುರೆಗುಂಡಿಗೆಗೆ ಸಂತ್ರಸ್ತೆಯನ್ನು ಕರೆದೊಯ್ದು ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ಸಂತ್ರಸ್ತೆ ಕೊಪ್ಪ ಹಾಗೂ ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಆರೋಪಿ ಸತೀಶ್ ಪಾತ್ರಿ ತಲೆಮರೆಸಿಕೊಂಡಿದ್ದನು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ಹಾಗೂ ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ ಮೌಢ್ಯ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಲು ಕೊಪ್ಪ ಪೊಲೀಸರು ತೀವ್ರ ಶೋಧ ನಡೆಸಿದ್ದು, ಅಂತಿಮವಾಗಿ ಬೆಂಗಳೂರಿನ ಜೆ.ಪಿ. ನಗರದಲ್ಲಿ ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಈ ಘಟನೆಯ ಬೆನ್ನಲ್ಲೇ, ಇದೇ ವ್ಯಕ್ತಿ ಈ ಹಿಂದೆ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಭೂತ ಬಿಡಿಸುವ ನೆಪದಲ್ಲಿ ಬಲವಂತವಾಗಿ ಕೋಳಿ ರಕ್ತ ಕುಡಿಸಿದ್ದ ಆಘಾತಕಾರಿ ವಿಚಾರವೂ ಬೆಳಕಿಗೆ ಬಂದಿದೆ. ಈ ಅಮಾನವೀಯ ಕೃತ್ಯದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ತೀವ್ರ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿತ್ತು.


