ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿರುವ ವಿವಿಧ ಸಾಮಾಜಿಕ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳ ಒಕ್ಕೂಟ, ಈ ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.
ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮೂಲಕ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಎಸ್ಐಆರ್ ಪ್ರಕ್ರಿಯೆಯಿಂದ ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಅನಿಯಂತ್ರಿತವಾಗಿ ಅಳಿಸಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳು, ವಲಸೆ ಕಾರ್ಮಿಕರು, ಒಂಟಿ ಮಹಿಳೆಯರು, LGBTQIA+ ಸಮುದಾಯದವರು, ದಲಿತರು ಮತ್ತು ಅಲ್ಪಸಂಖ್ಯಾತರು ಮತದಾನದ ಹಕ್ಕಿನಿಂದ ವಂಚಿತರಾಗುವ ಆತಂಕ ಎದುರಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ.
ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಫಾರಂ 7 ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಂಡು ರಾಜಕೀಯ ಪ್ರೇರಿತವಾಗಿ ಹೆಸರುಗಳನ್ನು ಅಳಿಸಲಾಗುತ್ತಿದೆ. ಹೊಸ ಮತದಾರರ ಸೇರ್ಪಡೆಗಾಗಿ ಫಾರಂ 6 ಮೂಲಕ ಅರ್ಜಿ ಸಲ್ಲಿಸಿದರೂ, ಹೆಸರು ಸೇರ್ಪಡೆಯ ಪ್ರಮಾಣ ಕಡಿಮೆಯಾಗಿದೆ. ಚುನಾವಣಾ ಆಯೋಗವು ರಾಜಕೀಯ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸುತ್ತಿದ್ದು, ಈ ಪ್ರಕ್ರಿಯೆ ಸಾರ್ವಜನಿಕರ ವಿಶ್ವಾಸ ಕಳೆದುಕೊಂಡಿದೆ ಎಂದು ಒಕ್ಕೂಟ ಆರೋಪಿಸಿದೆ.
2025ರ ಜನವರಿಯಲ್ಲಿದ್ದ ಮತದಾರರ ಪಟ್ಟಿಗಳನ್ನು ಯಥಾವತ್ತಾಗಿ ಮರುಸ್ಥಾಪಿಸಬೇಕು. ಅಲ್ಲದೆ, ಪಾರದರ್ಶಕತೆ ಕಾಪಾಡುವಲ್ಲಿ ವಿಫಲವಾದರೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ರಾಜೀನಾಮೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಫಾ. ವಿನೋದ್, ಎಸ್ಡಿಪಿಐ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರ್, ಜಮಾಅತೆ ಇಸ್ಲಾಮಿ ಹಿಂದ್ನ ಅಮೀನ್ ಹಸನ್, ವೆಲ್ಫೇರ್ ಪಾರ್ಟಿಯ ಮುನೀರ್ ಪದ್ರಂಗಿ, ಸಿಪಿಐಎಂಎಲ್ ನಾಯಕ ರಾಮಣ್ಣ ವಿಟ್ಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


