ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಲಿಖಿತವಾಗಿ ಅಥವಾ ಇ-ಮೇಲ್ ಮೂಲಕ ಸಲ್ಲಿಸಲು ಅಕ್ಟೋಬರ್ 30ರವರೆಗೆ ಅವಕಾಶ ನೀಡಲಾಗಿದೆ.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಜಿಲ್ಲೆ ಎಂದು ಬದಲಾಯಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿತ್ತು. ಈ ಸಂಬಂಧ ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದರು.
ಸಾರ್ವಜನಿಕರು ತಮ್ಮ ಸಲಹೆಗಳನ್ನು ಈ ಕೆಳಗಿನ ವಿಳಾಸಗಳಿಗೆ ಕಳುಹಿಸಬಹುದು:
1. ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ 235, ಎರಡನೇ ಮಹಡಿ, ವಿಧಾನಸೌಧ, ಬೆಂಗಳೂರು–560001. ಇ-ಮೇಲ್: [email protected]
2. ಅಪರ ಕಾರ್ಯದರ್ಶಿಗಳು, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ 711, ಏಳನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು–560001, ಇ-ಮೇಲ್: [email protected]
3. ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ, ಪ್ರಜಾಸೌಧ, ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇಂದ್ರ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಪಡೀಲು, ಮಂಗಳೂರು–575007, ಇ-ಮೇಲ್: [email protected]
ಜಿಲ್ಲೆಯ ಮರುನಾಮಕರಣದ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ಅಕ್ಟೋಬರ್ 30ರೊಳಗೆ ಸಲ್ಲಿಸಬಹುದಾಗಿದೆ.


