ಉಡುಪಿ: ನವರಾತ್ರಿ ಸಂಭ್ರಮದ ನಡುವೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿ ಅವಘಡ ಸಂಭವಿಸಿದೆ. ಬುಧವಾರ ಬಲವಾದ ಗಾಳಿ ಬೀಸಿದ ಪರಿಣಾಮ ದೇವಸ್ಥಾನದ ಎದುರಿನ ವಾಣಿಜ್ಯ ಸಂಕೀರ್ಣದ ಮೇಲಿದ್ದ ಬೃಹತ್ ಅಲಂಕಾರಿಕ ಲೈಟ್ ಸೆಟ್ ಭಕ್ತರ ಮೇಲೆ ಬಿದ್ದಿದೆ.
ಬಿಸಿಲಿನಿಂದ ರಕ್ಷಣೆ ಪಡೆಯಲು ಕಟ್ಟಡದ ನೆರಳಿನಲ್ಲಿ ನಿಂತಿದ್ದ ಭಕ್ತರ ಮೇಲೆ ಲೈಟ್ ಸೆಟ್ ಬಿದ್ದ ಪರಿಣಾಮ ವಯೋವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮತ್ತಿಬ್ಬರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ನವರಾತ್ರಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅವಘಡ ಸಂಭವಿಸಿರುವುದು ಆತಂಕ ಮೂಡಿಸಿದೆ. ದೇವಸ್ಥಾನದ ಸುತ್ತಮುತ್ತ ಅಳವಡಿಸಿರುವ ಅಲಂಕಾರಿಕ ದೀಪಗಳು ಹಾಗೂ ಇತರ ವ್ಯವಸ್ಥೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


