Tuesday, October 20, 2026
Homeಕರಾವಳಿಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಕ್ರಮ ಜಾಗ ಒತ್ತುವರಿ ಆರೋಪ: ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ...

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಕ್ರಮ ಜಾಗ ಒತ್ತುವರಿ ಆರೋಪ: ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ವಿರುದ್ಧ ದೂರು

- Advertisement -
- Advertisement -

ಬೆಳ್ತಂಗಡಿ: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿ, ಬಾಡಿಗೆ ಮೂಲಕ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಅಕ್ಟೋಬರ್ 19ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಅಕ್ರಮವಾಗಿ ಜಾಗ ಒತ್ತುವರಿ ಹಾಗೂ ಕಟ್ಟಡ ನಿರ್ಮಾಣದ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ದೇವಸ್ಥಾನದ ಜಾಗ ಒತ್ತುವರಿ ಆರೋಪ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಎದುರು 1993ರಲ್ಲಿ ಕಾಯ್ದಿರಿಸಲಾಗಿದ್ದ ಜಾಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. 2012ರಿಂದ 2015ರವರೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿದ್ದ ಕೊಕ್ಕಡ ಗ್ರಾಮದ ಹಿತ್ತಿಲು ಮನೆ ನಿವಾಸಿ ಕೃಷ್ಣ ಭಟ್ ಅವರು, ತಮ್ಮ ಅಧಿಕಾರಾವಧಿಯಲ್ಲಿ ದೇವಸ್ಥಾನದ ಜಾಗವನ್ನು ತಾವು ಅಧ್ಯಕ್ಷರಾಗಿದ್ದ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ನ ಜಾಗದೊಂದಿಗೆ ಸೇರಿಸಿಕೊಂಡು ಒತ್ತುವರಿ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ, ಗ್ರಾಮ ಪಂಚಾಯಿತ್ ಅಥವಾ ಸಂಬಂಧಪಟ್ಟ ಇಲಾಖೆಗಳ ಪೂರ್ವಾನುಮತಿ ಹಾಗೂ ಅಧಿಕೃತ ದಾಖಲೆಗಳಿಲ್ಲದೆ ಏಳು ಅಂಗಡಿ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಅಂಗಡಿ ಬಾಡಿಗೆ, ಹಣ ವಸೂಲಿ ಮತ್ತು ಶಾಂತಿಭಂಗದ ಆರೋಪ: ನಿರ್ಮಿಸಲಾಗಿರುವ ಅಂಗಡಿ ಕೊಠಡಿಗಳನ್ನು ಇತರರಿಗೆ ಬಾಡಿಗೆಗೆ ನೀಡಿ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಂಗಡಿಗಳನ್ನು ಪಡೆದ ಕೆಲವರು ರೌಡಿಶೀಟರ್‌ಗಳು ಹಾಗೂ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದವರು ಎಂದು ಆರೋಪಿಸಲಾಗಿದ್ದು, ದೇವಸ್ಥಾನದ ಆವರಣದಲ್ಲಿ ಪ್ರತಿನಿತ್ಯ ಜಗಳವಾಡುವ ಮೂಲಕ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಘಟನೆಗಳಿಗೆ ಸಂಬಂಧಿಸಿದ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದರಿಂದ ದೇವಸ್ಥಾನ ಹಾಗೂ ಆಡಳಿತ ಸಮಿತಿಯ ಗೌರವಕ್ಕೆ ಧಕ್ಕೆಯಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ: ದೇವಸ್ಥಾನದ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿ ವ್ಯವಹಾರ ನಡೆಸುತ್ತಿರುವವರ ವಿರುದ್ಧ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿರುವವರ ವಿರುದ್ಧ ತಕ್ಷಣ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಧರ್ಮಸ್ಥಳ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!