ಉಡುಪಿ: ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು ಬಾಲಕಿಯರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕೊಪ್ಪರಿಗೆ ಗುಡ್ಡೆ ಎಂಬಲ್ಲಿ ನಡೆದಿದೆ.
ಮೃತರನ್ನು ಮುಳ್ಳಿಕಟ್ಟೆಯಲ್ಲಿ ಜೋಪಡಿಯಲ್ಲಿ ವಾಸವಾಗಿದ್ದ, ಮೂಲತಃ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಮುದ್ದಿನಕೊಪ್ಪದ ಚಂದ್ರು ಬಸವರಾಜ ವೇಷಗಾರ ಮತ್ತು ಮಂಜಕಾಳು ದಂಪತಿಯ ಪುತ್ರಿ ಸುನೀತಾ (13) ಹಾಗೂ ಅವರ ಚಿಕ್ಕಪ್ಪ ದಿವಂಗತ ಮಂಜುನಾಥ ಮತ್ತು ಶಾರದಾ ದಂಪತಿಯ ಪುತ್ರಿ ವೈಶಾಲಿ (13) ಎಂದು ಗುರುತಿಸಲಾಗಿದೆ. ಇಬ್ಬರೂ ಹೊಸಾಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದರು.
ಭಾನುವಾರ ಸಂಜೆ ಸುಮಾರು 4 ಗಂಟೆಗೆ ಜೋಪಡಿಯ ಐವರು ಮಕ್ಕಳು ಹೊಸಾಡು ಗ್ರಾಮದ ಕೊಪ್ಪರಿಗೆ ಗುಡ್ಡೆಯಲ್ಲಿರುವ ಕಡುಬಿನ ಕೆರೆಗೆ ಬಟ್ಟೆ ತೊಳೆಯಲು ತೆರಳಿದ್ದರು. ಈ ವೇಳೆ ಕೆರೆಯ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದ ಸುನೀತಾ ಮತ್ತು ವೈಶಾಲಿ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಂಗೊಳ್ಳಿಯ ಮುಳುಗು ತಜ್ಞ ದಿನೇಶ್ ಖಾರ್ವಿ ಅವರ ತಂಡ, ಟೀಮ್ ಎಚ್ಐ ತುರ್ತು ಸ್ಪಂದನ ತಂಡ, ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮೇಲಕ್ಕೆತ್ತಲು ನೆರವಾದರು.
ನಂತರ ಗಂಗೊಳ್ಳಿಯ ಶ್ರೀ ವೀರೇಶ್ವರ ಸೇವಾ ಟ್ರಸ್ಟ್ನ ಆಂಬುಲೆನ್ಸ್ ಮೂಲಕ ಮೃತದೇಹಗಳನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಲಾಯಿತು. ಗಂಗೊಳ್ಳಿ ಠಾಣೆಯ ಪಿಎಸ್ಐ ಪವನ್ ನಾಯಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


