ಮಣಿಪಾಲ: ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಮಣಿಪಾಲದ ವಿದ್ಯಾರತ್ನನಗರದಲ್ಲಿ ಈ ಘಟನೆ ನಡೆದಿದೆ.
ಬಂಧಿತನನ್ನು ಉಡುಪಿಯ ಕಿನ್ನಿಮುಲ್ಕಿ ನಿವಾಸಿ ಮಹಮ್ಮದ್ ಪರ್ವೇಜ್ (26) ಎಂದು ಗುರುತಿಸಲಾಗಿದೆ. ಆತನಿಂದ ಸುಮಾರು 20 ಇಂಚು ಉದ್ದದ ಕಬ್ಬಿಣದ ಲಾಂಗ್ ಹಾಗೂ 16 ಇಂಚು ಉದ್ದದ ಕಬ್ಬಿಣದ ಚಾಕುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಿಚಾರಣೆ ವೇಳೆ ದಾವೂದ್, ಇಸಾಕ್ ಹಾಗೂ ಗರುಡ ಗ್ಯಾಂಗ್‌ನ ಕೆಲವರೊಂದಿಗೆ ವೈಮನಸ್ಸು ಇದ್ದು, ಅವರ ಮೇಲೆ ಹಲ್ಲೆ ನಡೆಸುವ ಉದ್ದೇಶದಿಂದ ಆಯುಧಗಳನ್ನು ಇಟ್ಟುಕೊಂಡಿರುವುದಾಗಿ ಆರೋಪಿ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 175/2026ರ ಅಡಿಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 4 ಮತ್ತು 25(1B)(b)ರಂತೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


