
ಬೆಳ್ತಂಗಡಿ: ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರತಿ ಲೀಟರ್ ಹಾಲಿನ ದರವನ್ನು 8 ರೂಪಾಯಿ ಏರಿಕೆ ಮಾಡಿ, ಸಂಕಷ್ಟದಲ್ಲಿರುವ ಹೈನುಗಾರರಿಗೆ ಪ್ರತಿ ಲೀಟರ್ಗೆ 7 ರೂಪಾಯಿ ನೀಡುವುದಾಗಿ ಘೋಷಿಸಿರುವುದು ಅತ್ಯಂತ ಸ್ವಾಗತಾರ್ಹ ನಿರ್ಧಾರ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಪಶು ಆಹಾರದ ಬೆಲೆ ಹಾಗೂ ಪಶು ನಿರ್ವಹಣಾ ವೆಚ್ಚಗಳು ದಿನದಿಂದ ದಿನಕ್ಕೆ ನಿರಂತರವಾಗಿ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಹೈನುಗಾರಿಕಾ ಕ್ಷೇತ್ರ ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ, ಹೈನುಗಾರರ ಕಣ್ಣೀರು ಒರೆಸುವ ನಿಟ್ಟಿನಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದೆ” ಎಂದಿದ್ದಾರೆ.
“ರೈತರ ಹಾಗೂ ಗ್ರಾಮೀಣ ಭಾಗದ ಆರ್ಥಿಕ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಹೈನುಗಾರರಿಗೆ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿ 7 ರೂಪಾಯಿ ನೀಡಿರುವುದು ಈ ಸರ್ಕಾರದ ರೈತಪರ ಕಾಳಜಿಗೆ ಸಾಕ್ಷಿಯಾಗಿದೆ. ಹೈನುಗಾರರ ಹಿತ ಕಾಯಲು ಇಂತಹ ಐತಿಹಾಸಿಕ ತೀರ್ಮಾನ ಕೈಗೊಂಡಿರುವ ಕಾಂಗ್ರೆಸ್ ಸರ್ಕಾರಕ್ಕೆ ಸಮಸ್ತ ಹೈನುಗಾರರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ರಕ್ಷಿತ್ ಶಿವರಾಂ ಪ್ರಕಟಣೆಯಲ್ಲಿ ವ್ಯಕ್ತಪಡಿಸಿದ್ದಾರೆ.


