
ಉಡುಪಿ: ಪ್ರದೀಪ್ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಎಸ್ಪಿ ಹರಿರಾಮ್ ಶಂಕರ್, ಪ್ರದೀಪ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲು ಐದು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
2025ರ ನವೆಂಬರ್ 10ರಂದು ಯುವತಿ ಪ್ರದೀಪ್ ವಿರುದ್ಧ ದೂರು ನೀಡಿದ್ದರು. ಮದುವೆಯಾಗದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರದೀಪ್ ಬಂಧನವಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾದ ಪ್ರದೀಪ್, ನವೆಂಬರ್ 29ರಂದು ಯುವತಿಯನ್ನು ದೊಡ್ಡಪಾಡೆ ಎಂಬಲ್ಲಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ದಾಖಲೆಗಳ ಆಧಾರದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಎಸ್ಪಿ ತಿಳಿಸಿದರು.
2026ರ ನವೆಂಬರ್ 28ರಂದು ಯುವತಿಯನ್ನು ಕೊಲೆ ಮಾಡಲು ಪ್ರದೀಪ್ ಯತ್ನಿಸಿದ್ದಾರೆ ಹಾಗೂ ಆಕೆಯ ತಾಯಿಯ ಮೇಲೆ ಖಾರದ ಪುಡಿ ಎರಚಿದ್ದಾರೆ ಎಂಬ ಆರೋಪವಿದೆ. ಈ ವೇಳೆ ಯುವತಿಯ ಸಂಬಂಧಿಕರು ಸ್ಥಳಕ್ಕೆ ಬಂದು ಪ್ರದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ. ಸುಮಾರು 7ರಿಂದ 8 ಮಂದಿ ಹಲ್ಲೆ ನಡೆಸಿದ್ದು, ಪೊಲೀಸರು ಪ್ರದೀಪ್ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದರು.
ಪ್ರದೀಪ್ ಮೇಲಿನ ಹಲ್ಲೆ ಪ್ರಕರಣವನ್ನು ಆರಂಭದಲ್ಲಿ ಎಫ್ಐಆರ್ ಬದಲು ಎನ್ಸಿ ಪ್ರಕರಣವಾಗಿ ದಾಖಲಿಸಲಾಗಿತ್ತು. ಈ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸ್ ಉಪನಿರೀಕ್ಷಕರನ್ನು ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಇಲಾಖಾ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.
ಪ್ರದೀಪ್ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲು ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯ ಖಾಸಗಿ ಫೋಟೋಗಳನ್ನು ಹಂಚಿಕೊಳ್ಳುತ್ತಿರುವ ಬಗ್ಗೆ ಎಸ್ಪಿ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಪೋಸ್ಟ್ಗಳನ್ನು ಹಂಚಿಕೊಂಡಿರುವ ಸುಮಾರು 150 ಖಾತೆಗಳನ್ನು ಪೊಲೀಸರು ಗುರುತಿಸಿದ್ದಾರೆ. ಯುವತಿಯ ಬಗ್ಗೆ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕುವವರು ಹಾಗೂ ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಪ್ರಕರಣದ ಬಗ್ಗೆ ಪರಿಶೀಲಿಸದೆ ಯಾವುದೇ ಮಾಹಿತಿ ಹಂಚಿಕೊಳ್ಳಬಾರದು. ಕಾನೂನು ಪ್ರಕ್ರಿಯೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಎಸ್ಪಿ ಮನವಿ ಮಾಡಿದರು.


