ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ 3 ಕೆ.ಜಿ. 800 ಗ್ರಾಂ ಗಾಂಜಾ ಸೇರಿದಂತೆ ಒಟ್ಟು ₹3.94 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಪುತ್ತೂರು ತಾಲೂಕಿನ ಪಡ್ನೂರು ಪೋಸ್ಟ್ ವ್ಯಾಪ್ತಿಯ ಪಡ್ಡಾಯೂರು ಹೌಸ್ ನಿವಾಸಿ ಮೊಹಮ್ಮದ್ ನಿಸಾರ್ (23) ಎಂದು ಗುರುತಿಸಲಾಗಿದೆ.
ನವೆಂಬರ್ 5ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡಲು ವ್ಯಕ್ತಿಯೊಬ್ಬ ಬಂದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಪಣಂಬೂರು ಠಾಣೆಯ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ ಅಂದಾಜು ₹1.90 ಲಕ್ಷ ಮೌಲ್ಯದ 3 ಕೆ.ಜಿ. 800 ಗ್ರಾಂ ಗಾಂಜಾ, ₹4 ಸಾವಿರ ಮೌಲ್ಯದ ಮೊಬೈಲ್ ಫೋನ್ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ್ದ ಕೆಎಲ್ 14 1662 ನೋಂದಣಿ ಸಂಖ್ಯೆಯ ಅಂದಾಜು ₹2 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ವಿಚಾರಣೆ ವೇಳೆ ಆರೋಪಿ ಸುರತ್ಕಲ್, ಪಣಂಬೂರು, ಕಾವೂರು ಸೇರಿದಂತೆ ಮಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದುದಾಗಿ ತಿಳಿದುಬಂದಿದೆ. ಅಲ್ಲದೆ, ಈ ಹಿಂದೆಯೂ ಹಲವು ಬಾರಿ ಮಂಗಳೂರು ನಗರದಲ್ಲಿ ಗಾಂಜಾ ಮಾರಾಟ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 137/2026ರ ಅಡಿಯಲ್ಲಿ ಎನ್ಡಿಪಿಎಸ್ ಕಾಯ್ದೆಯ ಕಲಂ 8(C), 20(b)(ii)(A) ರಂತೆ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


