
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ರಸ್ತೆ ದಾಟುತ್ತಿದ್ದ ದಿವ್ಯಾಂಗ ಪಾದಚಾರಿಯೊಬ್ಬರಿಗೆ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಮೃತರನ್ನು ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ನಿವಾಸಿ, ಕೂಲಿ ಕಾರ್ಮಿಕ ಪುರುಷೋತ್ತಮ ಪೂಜಾರಿ (38) ಎಂದು ಗುರುತಿಸಲಾಗಿದೆ.
ಪುರುಷೋತ್ತಮ ಪೂಜಾರಿಯವರು ಸೂರಿಕುಮೇರು ಜಂಕ್ಷನ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದರಾದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.


