Wednesday, November 11, 2026
Homeಕರಾವಳಿಉಡುಪಿಉಚಿತ ಅಕ್ಕಿ ವಿತರಣೆಯಲ್ಲಿ ರಾಜ್ಯ ಸರ್ಕಾರ ವಿಫಲ; ಅಕ್ರಮ ಮಾರಾಟದ ಆರೋಪ, ಕ್ರಮಕ್ಕೆ ಕೋಟ ಶ್ರೀನಿವಾಸ...

ಉಚಿತ ಅಕ್ಕಿ ವಿತರಣೆಯಲ್ಲಿ ರಾಜ್ಯ ಸರ್ಕಾರ ವಿಫಲ; ಅಕ್ರಮ ಮಾರಾಟದ ಆರೋಪ, ಕ್ರಮಕ್ಕೆ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

- Advertisement -
- Advertisement -

ಉಡುಪಿ: ರಾಜ್ಯದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಬಡವರಿಗೆ ವಿತರಿಸಲಾಗುತ್ತಿರುವ ಉಚಿತ ಅಕ್ಕಿ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಆಹಾರ ಇಲಾಖೆಯ ವೈಫಲ್ಯದಿಂದ ಉಚಿತ ಅಕ್ಕಿ ದುರುಪಯೋಗವಾಗಿ ಅಕ್ರಮವಾಗಿ ಮಾರಾಟವಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಕೇಂದ್ರ ಸರ್ಕಾರ ಕರ್ನಾಟಕದ ಸುಮಾರು 4 ಕೋಟಿ ಬಡವರಿಗೆ ಪ್ರತಿ ತಿಂಗಳು ತಲಾ 5 ಕೆ.ಜಿ. ಉಚಿತ ಅಕ್ಕಿ ನೀಡುತ್ತಿದೆ. ಇದಕ್ಕಾಗಿ ಪ್ರತಿ ತಿಂಗಳು ಸುಮಾರು 2 ಲಕ್ಷ ಕ್ವಿಂಟಾಲ್ ಅಕ್ಕಿ ಸರಬರಾಜು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರ 834 ಕೋಟಿ ರೂ. ಅನುದಾನ ಬಿಡುಗಡೆ ಮಾಡುತ್ತಿದೆ. ಈ ಯೋಜನೆಯಡಿ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರು ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರ 10 ಕೆ.ಜಿ. ಅಕ್ಕಿ ನೀಡುವುದಾಗಿ ಘೋಷಿಸಿತ್ತು. ಅದರಲ್ಲಿ 5 ಕೆ.ಜಿ. ಅಕ್ಕಿಯನ್ನು ರಾಜ್ಯ ಸರ್ಕಾರವೇ ನೀಡುವುದಾಗಿ ಹೇಳಿದ್ದರೂ, ಈವರೆಗೆ ಅದರ ಸಮರ್ಪಕ ಅನುಷ್ಠಾನದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ ಎಂದು ಟೀಕಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ಪೂರೈಕೆಯಾಗುವ ಉಚಿತ ಅಕ್ಕಿಯ ಬಹುಪಾಲು ದುರುಪಯೋಗವಾಗುತ್ತಿದ್ದು, ಅಕ್ರಮವಾಗಿ ಮಾರಾಟ ಮಾಡುವುದರ ಜೊತೆಗೆ ಪಾಲಿಶ್ ಮಾಡಿ ವಿದೇಶಗಳಿಗೂ ರವಾನಿಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ವಿಚಾರದಲ್ಲಿ ಆಹಾರ ಸಚಿವರು ಮೌನ ವಹಿಸಿರುವುದು ಸರಿಯಲ್ಲ. ಅಕ್ರಮ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರದ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ಉಚಿತ ಅಕ್ಕಿ ತಲುಪಿಸುವ ಮೂಲಕ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಆಹಾರ ಇಲಾಖೆಯೂ ಈ ಬಗ್ಗೆ ವಿಶೇಷ ನಿಗಾ ವಹಿಸಿ ಅಕ್ರಮ ಮಾರಾಟ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!