
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 15ರಿಂದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ನವೆಂಬರ್ 14ರವರೆಗೆ ರಾಜ್ಯದಾದ್ಯಂತ ಒಣ ಹವಾಮಾನ ಮುಂದುವರಿಯಲಿದೆ. ದಕ್ಷಿಣ ಕೇರಳ ಕರಾವಳಿಯಲ್ಲಿದ್ದ ಚಂಡಮಾರುತದ ಪರಿಚಲನೆ ಇದೀಗ ಆಗ್ನೇಯ ಅರೇಬಿಯನ್ ಸಮುದ್ರ ಹಾಗೂ ಲಕ್ಷದ್ವೀಪದ ಸುತ್ತಮುತ್ತಲಿನ ಪ್ರದೇಶದಲ್ಲಿ ನೆಲೆಗೊಂಡಿದೆ. ಮತ್ತೊಂದು ಚಂಡಮಾರುತದ ಪರಿಚಲನೆ ಮನ್ನಾರ್ ಕೊಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಡುಬಂದಿದೆ.
ನವೆಂಬರ್ 15 ಮತ್ತು 16ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಇದೇ ಅವಧಿಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಐಎಂಡಿ ತನ್ನ ದೈನಂದಿನ ಹವಾಮಾನ ವರದಿಯಲ್ಲಿ ತಿಳಿಸಿದೆ.


