
ಮಂಗಳೂರು: ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ್ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗೆ ಮನವಿ ಸಲ್ಲಿಸಿದೆ.
2025ರ ಏಪ್ರಿಲ್‌ನಿಂದ ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 10,000 ರೂ.ಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ, ಸರ್ಕಾರ ಈ ಭರವಸೆಯನ್ನು ಇನ್ನೂ ಈಡೇರಿಸಿಲ್ಲ ಎಂದು ಸಂಘ ಆರೋಪಿಸಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಗೌರವಧನ ಕೇವಲ 1,500 ರೂ. ಮಾತ್ರ ಹೆಚ್ಚಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಕೇರಳದಲ್ಲಿ ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 12,000 ರೂ. ಗೌರವಧನ ನೀಡಲಾಗುತ್ತಿದೆ. ಕರ್ನಾಟಕದಲ್ಲೂ ಕನಿಷ್ಠ 15,000 ರೂ. ಗೌರವಧನ ನೀಡಬೇಕು ಎಂದು ಸಂಘ ಒತ್ತಾಯಿಸಿದೆ. ಅಲ್ಲದೆ, ಬಾಕಿ ಇರುವ ಹಣವನ್ನು ತಕ್ಷಣ ಪಾವತಿಸಬೇಕು ಮತ್ತು ಕೆಲಸಕ್ಕೆ ಬಳಸಲು ಆಶಾ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್‌ಗಳನ್ನು ಒದಗಿಸಬೇಕು ಎಂದು ಮನವಿ ಮಾಡಿದೆ.
ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು, ನವೆಂಬರ್ 17ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಸರ್ಕಾರ ಬೇಡಿಕೆಗಳನ್ನು ಈಡೇರಿಸುವವರೆಗೆ ಪ್ರತಿಭಟನೆ ಮುಂದುವರಿಸುವುದಾಗಿ ಸಂಘ ಎಚ್ಚರಿಕೆ ನೀಡಿದೆ.


