
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕಾಜೂರು ದರ್ಗಾ ಶರೀಫ್‌ನ ಸಮುದಾಯ ಭವನ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 50 ಲಕ್ಷ ರೂ. ಅನುದಾನ ಮಂಜೂರಾಗಿದೆ ಎಂದು ಬೆಳ್ತಂಗಡಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.
2026-27ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ (VDP Scheme) ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಈ ಅನುದಾನವನ್ನು ಮಂಜೂರು ಮಾಡಿದ್ದಾರೆ.
ಕಾಜೂರು ದರ್ಗಾ ಶರೀಫ್ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪವಿತ್ರ ಧಾರ್ಮಿಕ ಕ್ಷೇತ್ರವಾಗಿದ್ದು, ‘ದಕ್ಷಿಣ ಭಾರತದ ಅಜ್ಮೀರ್’ ಎಂದೇ ಪ್ರಸಿದ್ಧಿ ಪಡೆದಿದೆ. ಇಲ್ಲಿ ಸರ್ವಧರ್ಮೀಯರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಾರೆ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿದ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಗೆ ರಕ್ಷಿತ್ ಶಿವರಾಂ ಅಭಿನಂದನೆ ಸಲ್ಲಿಸಿದ್ದಾರೆ.


