
ಮಂಗಳೂರು: ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಹಿಂಬದಿಯಿಂದ ಬರುತ್ತಿದ್ದ ಕಾರೊಂದು ಲಾರಿಗೆ ರಭಸವಾಗಿ ಢಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ನಂತೂರು ಜಂಕ್ಷನ್ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ಕಾರು ಚಾಲಕ ನಿಝಾಮ್ ಹಾಗೂ ಸಹ ಪ್ರಯಾಣಿಕ ಮುಫಿಝ್ ಗಂಭೀರವಾಗಿ ಗಾಯಗೊಂಡವರು. ಇಬ್ಬರನ್ನೂ ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ.
ಗುರುವಾರ ರಾತ್ರಿ ಸುಮಾರು 9.50ರ ವೇಳೆಗೆ ತಮಿಳುನಾಡು ನೋಂದಣಿಯ ಲಾರಿಯೊಂದು ಪಂಪ್ವೆಲ್ ಕಡೆಯಿಂದ ನಂತೂರು ಮಾರ್ಗವಾಗಿ ಸಾಗುತ್ತಿತ್ತು. ನಂತೂರು ಜಂಕ್ಷನ್ ಸಮೀಪಿಸುತ್ತಿದ್ದಂತೆ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ ಎನ್ನಲಾಗಿದೆ. ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯ ಹಿಂಭಾಗದ ಬಲಭಾಗಕ್ಕೂ ಹಾನಿಯಾಗಿದೆ. ಘಟನೆಯಿಂದಾಗಿ ಜಂಕ್ಷನ್ನಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಧಾವಿಸಿದ ಸಂಚಾರ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


