
ಬಂಟ್ವಾಳ: ರಸ್ತೆ ಬದಿಯಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ಅಪಾಯಕಾರಿಯಾಗಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 9ನೇ ತರಗತಿ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕೊಪ್ಪಳದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಸುಚಿನ್ (14) ಎಂದು ಗುರುತಿಸಲಾಗಿದೆ.
ಬಿ.ಸಿ. ರೋಡ್ – ಪೊಳಲಿ ರಾಜ್ಯ ಹೆದ್ದಾರಿಯ ತೆಂಕಬೆಳ್ಳೂರು ಗ್ರಾಮದ ಕೊಪ್ಪಳ ಎಂಬಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಗೂಡ್ಸ್ ಲಾರಿ ಚಾಲಕ ವಿಠ್ಠಲ್ ಕುಮಾರ್ ಎಂಬಾತ ಯಾವುದೇ ಸೂಚನೆ, ಪಾರ್ಕಿಂಗ್ ಲೈಟ್ ಅಥವಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ, ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗುವಂತೆ ಲಾರಿಯನ್ನು ರಸ್ತೆಯಲ್ಲೇ ನಿಲ್ಲಿಸಿದ್ದ ಎನ್ನಲಾಗಿದೆ.
ಇದೇ ವೇಳೆ ಬಿ.ಸಿ. ರೋಡ್ ಕಡೆಯಿಂದ ಪೊಳಲಿ ಕಡೆಗೆ ಸ್ಕೂಟರ್ ಚಲಾಯಿಸಿಕೊಂಡು ಬರುತ್ತಿದ್ದ ಸುಚಿನ್, ನಿಂತಿದ್ದ ಲಾರಿಯ ಹಿಂಭಾಗಕ್ಕೆ ರಭಸವಾಗಿ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ತೀವ್ರತೆಗೆ ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟ್ಟ ಬಾಲಕನ ಎಡಕಾಲಿನ ಮೂಳೆ ಮುರಿತಕ್ಕೊಳಗಾಗಿದ್ದು, ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿತ್ತು.
ತಕ್ಷಣವೇ ಗಾಯಾಳು ಸುಚಿನ್‌ನನ್ನು ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರ ಬೆಳಗ್ಗೆ 9:53ರ ಸುಮಾರಿಗೆ ಬಾಲಕ ಕೊನೆಯುಸಿರೆಳೆದಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ


