
ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದ್ದು, ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತಕ್ಕೆ ಶೇ. 50ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಈ ವಿಶೇಷ ರಿಯಾಯಿತಿ ಸೌಲಭ್ಯ ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಲಭ್ಯವಿರಲಿದೆ.
ಸರ್ಕಾರದ ಆದೇಶದ ಪ್ರಕಾರ, ಈ ಅವಧಿಯಲ್ಲಿ ವಾಹನ ಸವಾರರು ತಮ್ಮ ಬಾಕಿ ದಂಡದ ಮೊತ್ತದಲ್ಲಿ ಶೇ. 50ರಷ್ಟನ್ನು ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಈ ಹಿಂದೆ ಸರ್ಕಾರ ನೀಡಿದ್ದ ರಿಯಾಯಿತಿ ಅವಧಿಯನ್ನು ಮತ್ತೆ ವಿಸ್ತರಿಸುವಂತೆ ಸಾರ್ವಜನಿಕರಿಂದ ಮನವಿಗಳು ಬಂದಿದ್ದವು. ಇದನ್ನು ಪರಿಗಣಿಸಿರುವ ಸರ್ಕಾರ ಮತ್ತೊಮ್ಮೆ ರಿಯಾಯಿತಿ ನೀಡಲು ನಿರ್ಧರಿಸಿದೆ.
ದೀರ್ಘಕಾಲದಿಂದ ಬಾಕಿ ಉಳಿದಿರುವ ಸಂಚಾರ ದಂಡದ ಪ್ರಕರಣಗಳನ್ನು ಕಡಿಮೆ ಮಾಡುವುದು ಹಾಗೂ ವಾಹನ ಮಾಲೀಕರು ದಂಡ ಪಾವತಿಸಲು ಪ್ರೋತ್ಸಾಹಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಹೀಗಾಗಿ, ದಂಡ ಬಾಕಿ ಇರುವ ವಾಹನ ಸವಾರರು ನಿಗದಿತ ಅವಧಿಯೊಳಗೆ ಶೇ. 50ರಷ್ಟು ಮೊತ್ತವನ್ನು ಪಾವತಿಸಿ ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.


