
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧಿತರಾಗಿ ಜಾಮೀನಿನ ಮೇಲೆ ಹೊರಬಂದಿದ್ದ ಕ್ಯಾಥೊಲಿಕ್ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ (65) ಅವರನ್ನು ಇದೀಗ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮರುಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಕರಣದ ಹಿನ್ನೆಲೆ: 2026ರ ಮೇ 13ರಂದು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಸೇಂಟ್ ಸೆಬಾಸ್ಟಿಯನ್ ಚರ್ಚ್ಗೆ ಪ್ರಾರ್ಥನೆಗಾಗಿ ಬಂದಿದ್ದ 13 ವರ್ಷದ ಬಾಲಕನಿಗೆ ಫಾದರ್ ಸಿಪ್ರಿಯನ್ ಪಿಂಟೊ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 75(2) ಹಾಗೂ ಪೋಕ್ಸೊ (POCSO) ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ್ದ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತನಿಖೆಯ ಜವಾಬ್ದಾರಿಯನ್ನು ಕೇಂದ್ರ ಉಪವಿಭಾಗದ ಎಸಿಪಿ ರವೀಶ್ ನಾಯಕ್ ಅವರಿಗೆ ವಹಿಸಿದ್ದರು.
ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಂತೆ ಬಂಧನ: ಎಫ್ಐಆರ್ ದಾಖಲಾದ ಸಮಯದಲ್ಲಿ ಆರೋಪಿಯು ಅನಾರೋಗ್ಯದ ನಿಮಿತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಪೊಲೀಸರು ತಕ್ಷಣವೇ ಬಂಧಿಸಿರಲಿಲ್ಲ. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಹಿಂದಿನ ಪ್ರಕರಣ: ಈ ಹಿಂದೆ ಮಂಗಳೂರಿನ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್ನಲ್ಲಿ ಧರ್ಮಗುರುವಾಗಿದ್ದ ವೇಳೆ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಇವರ ಮೇಲೆ ಕೇಳಿಬಂದಿತ್ತು. ಈ ಕುರಿತು ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮೊದಲ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಕ್ಟೋಬರ್ 18ರಂದು ಬಂಧಿತರಾಗಿದ್ದ ಪಿಂಟೊ, ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದು ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.ಇದೀಗ ಪೆರ್ಮನ್ನೂರು ಚರ್ಚ್ ಪ್ರಕರಣದಲ್ಲಿ ಮರುಬಂಧನಕ್ಕೊಳಗಾಗಿರುವ ಆರೋಪಿ ಮತ್ತೆ ಜೈಲು ಸೇರಿದ್ದು, ಪೊಲೀಸರು ಎರಡೂ ಪ್ರಕರಣಗಳ ಕುರಿತು ತನಿಖೆಯನ್ನು ತೀವ್ರಗೊಳಿಸಿದ್ದಾರೆ.


