
ಮಂಗಳೂರು, ನ. 20: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ಕಸ್ಟಮ್ಸ್ ಅಧಿಕಾರಿಗಳು, ಇಬ್ಬರು ಪ್ರಯಾಣಿಕರಿಂದ ಸುಮಾರು 1.333 ಕೆ.ಜಿ. ತೂಕದ ‘ಆಂಫೆಟಮೈನ್’ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ನವೆಂಬರ್ 16ರಂದು ಮಸ್ಕತ್ನಿಂದ ಮಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರ ಚಲನವಲನಗಳ ಮೇಲೆ ಸಂಶಯಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರನ್ನು ತಪಾಸಣೆಗೆ ಒಳಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಯಾಣಿಕರು ತಂದಿದ್ದ ಚೆಕ್-ಇನ್ ಲಗೇಜ್ನಲ್ಲಿದ್ದ ಪೆಟ್ಟಿಗೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಆಲೂಗಡ್ಡೆ ಚಿಪ್ಸ್ ಪ್ಯಾಕೆಟ್ಗಳ ಒಳಗೆ ಅತ್ಯಂತ ಚಾಣಾಕ್ಷತನದಿಂದ ಅಡಗಿಸಿಟ್ಟಿದ್ದ 1.333 ಕೆ.ಜಿ. ಆಂಫೆಟಮೈನ್ ಮಾದಕ ವಸ್ತು ಪತ್ತೆಯಾಗಿದೆ.
ಅಧಿಕಾರಿಗಳು ತಕ್ಷಣವೇ ಮಾದಕ ವಸ್ತುವನ್ನು ಜಪ್ತಿ ಮಾಡಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಳ್ಳಸಾಗಣೆ ಜಾಲದ ಹಿಂದಿರುವ ಇತರ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ.


