
ಬೆಳ್ತಂಗಡಿ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ನಾಲ್ಕು ದಿನಗಳಿಂದ ರಾಜ್ಯದ ಸಾವಿರಾರು ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಕಾರ್ಯಕರ್ತೆಯರಿಗೆ ಮಾಸಿಕ ₹15,000 ಗೌರವಧನವನ್ನು ಸರ್ಕಾರ ತಕ್ಷಣ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ರಾಜ್ಯದ ಆರೋಗ್ಯ ವ್ಯವಸ್ಥೆಯ ತಳಮಟ್ಟದಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಬೀದಿಗಿಳಿದು ಹಗಲು-ರಾತ್ರಿ ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ಕಳವಳಕಾರಿ. ಇದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ” ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000 ಗೌರವಧನ ನೀಡುವುದಾಗಿ ಸ್ಪಷ್ಟ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ಮೂರು ವರ್ಷಗಳೇ ಕಳೆದರೂ ತನ್ನದೇ ಭರವಸೆಯನ್ನು ಈಡೇರಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಚುನಾವಣಾ ಭರವಸೆಗಳು ಕೇವಲ ಅಧಿಕಾರ ಪಡೆಯುವ ತಂತ್ರಗಳಾಗಬಾರದು; ಜನರಿಗೆ ನೀಡಿದ ಮಾತನ್ನು ಉಳಿಸಿಕೊಳ್ಳುವುದು ಸರ್ಕಾರದ ಕನಿಷ್ಠ ಜವಾಬ್ದಾರಿ ಎಂದು ಪೂಂಜ ಹೇಳಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಜೀವನ ನಿರ್ವಹಣೆಯ ವೆಚ್ಚದ ನಡುವೆ ಅಲ್ಪ ಗೌರವಧನದಲ್ಲಿ ಬದುಕು ಸಾಗಿಸುವುದು ಆಶಾ ಕಾರ್ಯಕರ್ತೆಯರಿಗೆ ಕಷ್ಟಕರವಾಗಿದೆ. ಗರ್ಭಿಣಿಯರ ಆರೈಕೆ, ತಾಯಿ-ಮಕ್ಕಳ ಆರೋಗ್ಯ ರಕ್ಷಣೆ, ಲಸಿಕಾ ಕಾರ್ಯಕ್ರಮ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಹಗಲಿರುಳು ಶ್ರಮಿಸುವ ಮಹಿಳೆಯರಿಗೆ ತಕ್ಕ ಗೌರವ ಮತ್ತು ಬದುಕಿನ ಭದ್ರತೆ ದೊರೆಯಬೇಕು. ಮಹಿಳೆಯರ ಸಬಲೀಕರಣದ ಬಗ್ಗೆ ಮಾತನಾಡುವ ಸರ್ಕಾರ, ಸಾವಿರಾರು ಮಹಿಳೆಯರು ನಾಲ್ಕು ದಿನಗಳಿಂದ ಬೀದಿಯಲ್ಲಿ ಹೋರಾಡುತ್ತಿರುವುದಕ್ಕೆ ಉತ್ತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಬೇಕು. ಆಶಾ ಕಾರ್ಯಕರ್ತೆಯರು ಹೊಸ ಬೇಡಿಕೆಯನ್ನೇನೂ ಇಟ್ಟಿಲ್ಲ; ಕಾಂಗ್ರೆಸ್ ಪಕ್ಷವೇ ನೀಡಿದ್ದ ಭರವಸೆಯ ಈಡೇರಿಕೆಗೆ ಆಗ್ರಹಿಸುತ್ತಿದ್ದಾರೆ. ಅವರ ಬೇಡಿಕೆಗಳ ಬಗ್ಗೆ ಸಕಾರಾತ್ಮಕ ನಿರ್ಧಾರ ಕೈಗೊಂಡು ಪ್ರತಿಭಟನೆಯನ್ನು ಗೌರವಯುತವಾಗಿ ಅಂತ್ಯಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


